ಬೆಂಗಳೂರು: ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆ ಇನ್ನೆರಡು ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೇಸಿಗೆಯಲ್ಲಿ ಹೆಚ್ಚು ತಾಪಮಾನ ಉಂಟಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿಯಲ್ಲಿ ಮಾರ್ಚ್ 28ರವರೆಗೆ ಮಳೆಯಾಗಲಿದ್ದು, ರಾಜ್ಯದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯ ಹಲವೆಡೆ ಮಳೆ ಮುಂದುವರೆದಿದೆ. ಕೆಲವೆಡೆ ಸುರಿದ ಬಿರುಗಾಳಿ ಸಹಿತ ಮಳೆಗೆ ಸಾರ್ವಜನಿಕ ಆಸ್ತಿಪಾಸ್ತಿಗೆ ಧಕ್ಕೆ ಉಂಟಾಗಿದೆ.
ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಮಾರ್ಚ್28ರವರೆಗೆ ದಕ್ಷಿಣಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗಲಿದೆ. ಧಾರವಾಡ, ಹಾವೇರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ತುಂತುರು ಮಳೆ ನಿರೀಕ್ಷೆ ಇದೆ.
ಇದನ್ನೂ ಓದಿ: ಪಾವಗಡ ಬಸ್ ದುರಂತ ಪ್ರಕರಣ: ಚಿಕಿತ್ಸೆ ಫಲಿಸದೇ ಯುವಕ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ