ಬೆಂಗಳೂರು: ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತದ ಪರಿಣಾಮ ಈ ಬಾರಿ ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬಂಗಾಳ ಕೊಲ್ಲಿಯಲ್ಲಿ ಕಂಡುಬರುತ್ತಿರುವ ವಾಯುಭಾರ ಕುಸಿತದಿಂದಾಗಿ ಮುಂದಿನ ನಾಲ್ಕು ದಿನ ರಾಜ್ಯದ ದಕ್ಷಿಣ ಒಳನಾಡಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆ ಸುರಿಯಲಿದೆ. ಈ ಹಿನ್ನೆಲೆ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸದ್ಯಕ್ಕೆ ತಮಿಳುನಾಡು ಕರಾವಳಿಯಲ್ಲಿ ಸುಳಿಗಾಳಿ ನಿರ್ಮಾಣವಾಗಿದೆ. ಇದರ ಪ್ರಭಾವದಿಂದ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಮಂಗಳವಾರ ಗುಡುಗು ಸಹಿತ ಧಾರಾಕಾರ ಮಳೆ ಬೀಳಲಿದೆ. ನಾಳೆ ಮಳೆ ಅಬ್ಬರ ಕಡಿಮೆಯಾಗಲಿದೆ. ನವೆಂಬರ್ 11 ಹಾಗೂ 12 ರಂದು ಕೆಲವೆಡೆ ಭಾರಿ ಮಳೆ ಬೀಳಲಿದೆ ಎಂಬ ಮಾಹಿತಿ ದೊರೆತಿದೆ. ಪ್ರಮುಖವಾಗಿ ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ, ಕೊಡಗು, ಹಾಸನ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅರಬ್ಬಿ ಸಮುದ್ರದಲ್ಲೂ ವಾಯುಭಾರ ಕುಸಿತ: ಪೂರ್ವ ಅರಬ್ಬಿ ಸಮುದ್ರದ ಮಧ್ಯದಲ್ಲಿ ಕೂಡ ಸೃಷ್ಟಿಯಾಗಿರುವ ಪ್ರಬಲ ವಾಯುಭಾರ ಕುಸಿತವು ಪಶ್ಚಿಮ ದಿಕ್ಕಿನ ಮಾರ್ಗವಾಗಿ ಹಾದು ರಾಜ್ಯದ ಕರಾವಳಿ ಸಮೀಪಿಸಿದೆ. ಈ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನಲ್ಲಿ ಒಣ ಹವೆ: ಉತ್ತರ ಒಳನಾಡಿನಲ್ಲಿ ಹಿಂಗಾರು ಕ್ಷೀಣಿಸಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದೆಡೆ ಒಣಹವೆ ಮುಂದುವರಿಯಲಿದೆ ಎನ್ನುವ ಮಾಹಿತಿ ದೊರೆತಿದೆ.
ಕನಿಷ್ಠ-ಗರಿಷ್ಠ ತಾಪಮಾನ: ಕಾರವಾರದಲ್ಲಿ ಗರಿಷ್ಠ 33.4 ಡಿಗ್ರಿ ಬೆಂಗಳೂರಿನಲ್ಲಿ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ವರದಿ ಹೇಳಿದೆ.
ಚಳಿ ಗಾಳಿ: ರಾಜಧಾನಿಯಲ್ಲಿ ತಾಪಮಾನ ಕಡಿಮೆ ಇರುವ ಕಾರಣ ತಂಪು ಗಾಳಿ ಬೀಸುತ್ತಿದೆ. ಸಂಜೆಯಾಗುತ್ತಿದ್ದಂತೆ ಚಳಿ ಏರಿಕೆ ಕಂಡು ಬರುತ್ತಿದೆ.