ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ. ಆದ್ರೆ ಈ ವಿಚಾರ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತಂತೆ ಸಾಮಾಜಿಕ ಕಾರ್ಯಕರ್ತ ಕೇಶವ್ ಗೋಪಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ಪೀಠದಲ್ಲಿ ನಡೆಯಿತು.
ಈ ವೇಳೆ ಅರ್ಜಿದಾರರ ಪರ ವಕೀಲರು, ರಾಜ್ಯ ಸರ್ಕಾರ 2019ರ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಲ್ಲಿ 2016ರಲ್ಲಿ ರಚನೆಯಾಗಿದ್ದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ವಿಜಯ್ ಸಂಕೇಶ್ವರ, ಪ್ರಕಾಶ್ ಶೆಟ್ಟಿ ಮತ್ತು ಪ್ರಭಾತ್ ಆರ್ಟ್ ಇಂಟರ್ನ್ಯಾಷನಲ್ಅನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿರುವುದನ್ನು ನ್ಯಾಯಾಲಯದ ಗಮನಕ್ಕೆ ತಂದು, ಪ್ರಶಸ್ತಿ ತಡೆ ಹಿಡಿಯುವಂತೆ ಕೋರಿದರು.
ಈ ವೇಳೆ ನ್ಯಾಯಾಲಯ ಅರ್ಜಿದಾರರ ಆರೋಪಕ್ಕೆ ತಡೆ ನೀಡಲು ನಕಾರ ವ್ಯಕ್ತಪಡಿಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆಯನ್ನು ಒಂದು ವಾರ ಕಾಲ ಮುಂದೂಡಿದೆ.