ಬೆಂಗಳೂರು: ಕೇಂದ್ರ ಗ್ರಾಹಕರ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಲೋಕ್ ಜನಶಕ್ತಿ ಪಾರ್ಟಿ ಮುಖ್ಯಸ್ಥರಾಗಿ ಐದು ದಶಕಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಅವರು, ದೇಶದ ಪ್ರಮುಖ ದಲಿತ ಮುಖಂಡರಾಗಿ, ದೀನದಲಿತರ ಶಕ್ತಿಯಾಗಿದ್ದರು. ಜನಪರ ಕಾರ್ಯಕ್ರಮಗಳ ಮೂಲಕ ಬಿಹಾರದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಅವರ ನಿಧನದಿಂದ ಸಜ್ಜನ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಕುಟುಂಬದವರಿಗೆ ಮತ್ತು ಅವರ ಅಭಿಮಾನಿಗಳಿಗೆ ದು:ಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಡಿಸಿಎಂ ಗೋವಿಂದ ಕಾರಜೋಳ ಸಂತಾಪ:
ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತೀವ್ರ ಸಂತಾಪ ಸೂಚಿಸಿದ್ದಾರೆ. ಪಾಸ್ವಾನ್ ಅವರು 8 ಬಾರಿ ಸಂಸದರಾಗಿ, ಹಲವು ಬಾರಿ ಕೇಂದ್ರ ಸಚಿವರಾಗಿ ಗುರುತರವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಸರಳ, ಸಜ್ಜನಿಕೆಯ ರಾಜಕೀಯ ಮತ್ಸದ್ದಿಯಾಗಿದ್ದು, ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಏಳಿಗೆಗಾಗಿ ಅವರು ಅಪರವಾಗಿ ಶ್ರಮಿಸಿದ್ದಾರೆ. ಅವರ ನಿಧನದಿಂದ ಒಬ್ಬ ಹಿರಿಯ ರಾಜಕೀಯ ಮುತ್ಸದ್ದಿಯನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬ ಪರಿವಾರಕ್ಕೆ ಹಾಗೂ ಅನುಯಾಯಿಗಳಿಗೆ ಭಗವಂತನು ದುಃಖ ಭರಿಸುವ ಶಕ್ತಿ ನೀಡಿ, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಡಿಸಿಎಂ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಈಶ್ವರಪ್ಪ ಸಂತಾಪ:
ಸರಳ ಸಜ್ಜನಿಕೆಯ ರಾಜಕಾರಣಿ ರಾಜಕೀಯ ಮುತ್ಸದ್ದಿಯಾಗಿದ್ದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಮ್ಮನ್ನಗಲಿದ್ದಾರೆ. ಪಾಸ್ವಾನ್ ನಿಧನ ದೇಶಕ್ಕೆ ತುಂಬಲಾರದ ನಷ್ಟ. ಶೊಷಿತ ವರ್ಗದ ಪರವಾಗಿ ಜೀವನದುದ್ದಕ್ಕೂ ಹೊರಾಟ ಮಾಡುತ್ತಿದ್ದ ರಾಮ್ ವಿಲಾಸ್ ಪಾಸ್ವಾನ್ ಅಗಲಿಕೆ ನಮ್ಮೆಲ್ಲರಿಗೂ ತುಂಬ ನೊವು ತಂದಿದೆ. ಪಾಸ್ವಾನ್ ನಿಧನ ದುಃಖವನ್ನು ತಡೆಯುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ಕೊಟ್ಯಾಂತರ ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಸಂತಾಪ ಸೂಚಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಸಂತಾಪ:
ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಲೋಕ ಜನಶಕ್ತಿ ಪಾರ್ಟಿ(ಎಲ್‌ಜೆಪಿ) ಮುಖ್ಯಸ್ಥ, ಪಾಸ್ವಾನ್ ಅವರು 5 ದಶಕಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಅವರ ನಿಧನದಿಂದ ಪ್ರಮುಖ ನಾಯಕರೊಬ್ಬರನ್ನು ದೇಶ ಕಳೆದುಕೊಂಡಿದೆ ಎಂದು ತಿಳಿಸಿದ್ದಾರೆ. ಎನ್ಡಿಎ ಮೈತ್ರಿಕೂಟದಲ್ಲಿದ್ದ ಎಲ್‌ಜೆಪಿ ಪಕ್ಷದಿಂದ ಪಾಸ್ವಾನ್ ಅವರು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರಾಗಿ ದಕ್ಷತೆಯಿಂದ ಕಾರ್ಯ ನಿರ್ವಹಿಸುತ್ತಿದ್ದರು ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ಸಂತಾಪ:
ಪಾಸ್ವಾನ್ ಅವರ ನಿಧನ ತೀವ್ರ ನೋವುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಶೋಷಿತ ವರ್ಗದ ದನಿಯಾಗಿದ್ದ ಪಾಸ್ವಾನ್ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.