ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಬೆಂಗಳೂರು ನಗರ ವ್ಯಾಪ್ತಿಯ ಕಾಂಗ್ರೆಸ್ ನಾಯಕರ ಜೊತೆ ಸಭೆ ನಡೆಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ತಿಳಿಸಿದರು.
ಕುಮಾರಕೃಪ ಅತಿಥಿ ಗೃಹದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ನಗರ ವ್ಯಾಪ್ತಿಯ ಶಾಸಕರು ಹಾಗೂ ಸೋತ ಅಭ್ಯರ್ಥಿಗಳ ಜೊತೆ ಇಂದು ವೈಯಕ್ತಿಕವಾಗಿ ಪ್ರತ್ಯೇಕ ಚರ್ಚೆ ನಡೆಸಿದ್ದಾರೆ. ಪ್ರತಿಯೊಬ್ಬರಿಗೂ ಪ್ರತ್ಯೇಕವಾಗಿ ಹತ್ತು ನಿಮಿಷಗಳ ಕಾಲಾವಕಾಶ ನೀಡಿ ಚರ್ಚೆ ಮಾಡಿದ್ದಾರೆ. ಪಕ್ಷ ಸಂಘಟನೆ ಹಾಗೂ ಬೆಂಗಳೂರು ವ್ಯಾಪ್ತಿಯ ಬಲವರ್ಧನೆ ಬಗ್ಗೆ ವಿಶೇಷವಾಗಿ ಗಮನ ಹರಿಸಿ ಸಭೆ ನಡೆಸಿದ್ದರು. ಬಿಬಿಎಂಪಿ ಚುನಾವಣೆ ಎದುರಾಗುವ ಮುನ್ನವೇ ಪಕ್ಷವನ್ನು ಸಂಘಟಿಸುವ ವಿಚಾರವಾಗಿ ಚರ್ಚಿಸಿದ್ದಾರೆ ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ: ಕುಮಾರಕೃಪಾದಲ್ಲಿ ಬೆಂಗಳೂರು ನಾಯಕರ ಜೊತೆ ಸುರ್ಜೇವಾಲಾ ಸಭೆ ಆರಂಭ
ಶಾಸಕ ಅಖಂಡ ಶ್ರೀನಿವಾಸಮೂರ್ತಿ ದೂರು ಸಂಬಂಧ ಪ್ರತಿಕ್ರಿಯೆ ನೀಡಿ, ಪಕ್ಷ ಸಂಘಟನೆ ವಿಚಾರವಾಗಿ ಚರ್ಚೆ ನಡೆದಿದೆ. ಯಾವುದೇ ನಾಯಕರ ಸಮಸ್ಯೆಗಳ ಕುರಿತು ಮಾತುಕತೆ ಆಗಿಲ್ಲ. ನಾಳೆ ಈ ವಿಚಾರವಾಗಿ ನಾನು ಸುರ್ಜೇವಾಲಾ ಅವರೊಂದಿಗೆ ಮಾತನಾಡುತ್ತೇನೆ. ನಾಳೆ ಸಂಜೆಯವರೆಗೂ ಸುರ್ಜೇವಾಲಾ ಇರಲಿದ್ದು, ಈ ಬಗ್ಗೆ ಚರ್ಚೆ ನಡೆಸುತ್ತೇವೆ. ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.