ಬೆಂಗಳೂರು: ಐದು ದಶಕಗಳಿಂದ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕಾವೇರಿ ನಿವಾಸಕ್ಕೆ ಸೋಮವಾರ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಜಗದ್ಗುರುಗಳು ಆಗಮಿಸಿ ಗುರು ರಕ್ಷೆಯಿತ್ತು ಶುಭ ಹಾರೈಸಿದರು.
ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿ 2 ಸ್ಥಾನದಿಂದ ಅಧಿಕಾರ ಚುಕ್ಕಾಣಿ ಹಿಡಿಯುವವರೆಗೆ ಅವಿರತವಾಗಿ ಶ್ರಮಿಸಿ ಕನ್ನಡ ನಾಡಿನಲ್ಲಿ ಜಾತ್ಯಾತೀತವಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿರುವ ಕೀರ್ತಿ ಬಿ.ಎಸ್.ಯಡಿಯೂರಪ್ಪನವರಿಗೆ ಸಲ್ಲುತ್ತದೆ. ಮುಂದಿನ ದಿನಗಳಲ್ಲಿ ರಾಜ್ಯದ ಜನರ ನಾಡಿ ಮಿಡಿತ ಅರಿತು ಜನಸೇವೆ ಮಾಡುವಂತಹ ಶಕ್ತಿಯನ್ನು ಭಗವಂತ ಅವರಿಗೆ ನೀಡಲೆಂದು ಜಗದ್ಗುರುಗಳು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಉಪಸ್ಥಿತರಿದ್ದರು. ಇದಕ್ಕೂ ಮೊದಲು ಬಿ.ಎಸ್.ಯಡಿಯೂರಪ್ಪನವರ ಕುಟುಂಬದವರು ರಂಭಾಪುರಿ ಜಗದ್ಗುರುಗಳ ಪಾದ ಪೂಜೆ ನೆರವೇರಿಸಿ ಆಶೀರ್ವಾದ ಪಡೆದರು.