ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಳಿಕ ತಮ್ಮ ವಿರುದ್ಧ ಯಾವುದೇ ಮಾನಹಾನಿ ಸುದ್ದಿ ಬಿತ್ತರಿಸದಂತೆ ಮಾಧ್ಯಮಗಳಿಗೆ ತಡೆ ನೀಡಬೇಕು ಎಂದು ಕೋರಿ 6 ಮಂದಿ ಮಂತ್ರಿಗಳು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿರುವ ನ್ಯಾಯಾಲಯ ಮಾಧ್ಯಮಗಳ ವರದಿಗೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.
ಮಾಧ್ಯಮಗಳು ತಮ್ಮ ವಿರುದ್ಧ ಯಾವುದೇ ಮಾನಹಾನಿಕಾರಕ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿನ್ನೆ ಸಚಿವರಾದ ಶಿವರಾಮ ಹೆಬ್ಬಾರ್, ಬಿ.ಸಿ ಪಾಟೀಲ್, ಎಚ್.ಟಿ. ಸೋಮಶೇಖರ್, ಕೆ. ಸುಧಾಕರ್, ನಾರಾಯಣಗೌಡ, ಭೈರತಿ ಬಸವರಾಜ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ನಗರದ 20ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶ ಡಿ.ಎಸ್. ವಿಜಯಕುಮಾರ್, ಸುದ್ದಿ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳೂ ಸೇರಿ ಒಟ್ಟು 68 ಪ್ರತಿವಾದಿಗಳಿಗೆ ಆಕ್ಷೇಪಣೆ ಸಲ್ಲಿಸುವಂತೆ ತುರ್ತು ನೋಟಿಸ್ ಜಾರಿ ಮಾಡಿದ್ದಾರೆ.
ಜತೆಗೆ, ಅರ್ಜಿದಾರರ ವಿರುದ್ಧ ಯಾವುದೇ ಮಾನಹಾನಿ ಸುದ್ದಿ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ಹೊರಡಿಸಿದ್ದಾರೆ. ಇದೇ ವೇಳೆ ಮಾಧ್ಯಮಗಳ ಕರ್ತವ್ಯದ ಬಗ್ಗೆಯೂ ಪ್ರಸ್ತಾಪಿಸಿರುವ ನ್ಯಾಯಾಲಯ, ಮಾಧ್ಯಮಗಳನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಪರಿಗಣಿಸಿದ್ದೇವೆ. ಮಾಧ್ಯಮಗಳಿಗೆ ಅಭಿವ್ಯಕ್ತಿ ಸ್ವಾತಂತ್ರ್ಯವೂ ಇದೆ. ಜನರಿಗೆ ತಮ್ಮ ನಾಯಕರ ಬಗ್ಗೆ, ಅವರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಕೊಳ್ಳುವ ಹಕ್ಕು ಕೂಡ ಇದೆ. ಹಾಗಿದ್ದೂ, ಅರ್ಜಿದಾರರು ತಮ್ಮ ಮಾನಹಾನಿಯಾಗದಂತೆ ರಕ್ಷಣೆ ನೀಡಬೇಕು ಎಂದು ಕೋರುವ ಹಕ್ಕು ಹೊಂದಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗಣ್ಯರ ಮಾನಹಾನಿ ಮಾಡಿದ ಪ್ರಕರಣಗಳೂ ಇವೆ. ಈ ಹಿನ್ನೆಲೆಯಲ್ಲಿ ಅರ್ಜಿದಾರರ ಕೋರಿಕೆ ಪರಿಗಣಿಸಲಾಗುತ್ತಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.