ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿಗೆ ಬೆಳಗಾವಿ ಉಸ್ತುವಾರಿ ಹಾಗೂ ಮಹೇಶ್ ಕುಮಟಳ್ಳಿ ನಿಗಮ ಮಂಡಳಿ ಸ್ಥಾನ ಸಿಕ್ಕಿದ ಹಿನ್ನೆಲೆ ಉಭಯ ನಾಯಕರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದ್ದಾರೆ.
ಸಿಎಂ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ ಮುಖ್ಯಮಂತ್ರಿಗಳನ್ನು ಭೇಟಿಯಾದರು. ಬೆಳಗಾವಿ ಉಸ್ತುವಾರಿ ನೀಡಿದ್ದಕ್ಕೆ ರಮೇಶ್ ಜಾರಕಿಹೊಳಿ ಮತ್ತು ಕೊಳಗೇರಿ ಅಭಿವೃದ್ಧಿ ಮಂಡಳಿ ಜೊತೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡಿದ್ದಕ್ಕೆ ಸಿಎಂ ಗೆ ಅಭಿನಂದನೆ ಸಲ್ಲಿಸಿದರು.
ಈ ವೇಳೆ ಬೆಳಗಾವಿ ಜಿಲ್ಲೆಯ ಸಮಗ್ರ ವಿಕಾಸಕ್ಕಾಗಿ ಹೆಚ್ಚಿನ ಅನುದಾನ ಸೇರಿದಂತೆ ಎಲ್ಲಾ ರೀತಿಯ ಸಹಕಾರ ಕೊಡುವುದಾಗಿ ಸಿಎಂ ಭರವಸೆ ನೀಡಿದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್, ಸಿಎಂ ರಾಜಕೀಯ ಕಾರ್ಯದರ್ಶಿ ಶಂಕರ್ ಗೌಡ ಪಾಟೀಲ್ ಉಪಸ್ಥಿತರಿದ್ದರು.