ಬೆಂಗಳೂರು: ಇದೇ ಸೆಪ್ಟಂಬರ್ 9ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ನ್ಯಾಯಾಲಯಗಳಲ್ಲಿ ವಿಚಾರಣಾ ಹಂತದಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ಬೆಂಗಳೂರು ನಗರ ಪ್ರಧಾನ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಮುರಳೀಧರ ಪೈ ಅವರು ತಿಳಿಸಿದ್ದಾರೆ.
ಈ ಕುರಿತಂತೆ ನಗರದ ಸಿವಿಲ್ ನ್ಯಾಯಾಲಯ ಆವರಣದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥ ಪಡಿಸಿಕೊಳ್ಳಬಯಸುವವರು ಸಂಬಂಧ ಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ವಿವರಿಸಿದರು.
ಅಲ್ಲದೆ, ಅದಾಲತ್‌ನಲ್ಲಿ ಉಭಯ ಪಕ್ಷಗಾರರಿಗೆ ರಾಜೀ ಮಾಡಿಕೊಳ್ಳುವುದಕ್ಕೆ ಸೂಕ್ತ ರೀತಿಯಲ್ಲಿ ಮಾರ್ಗದರ್ಶನ ಮಾಡಿಕೊಡಲಾಗುವುದು. ಉಭಯ ಪಕ್ಷದವರಿಗೆ ಒಪ್ಪಿಗೆಯಾಗುವಂತೆ ಪ್ರಕರಣ ತೀರ್ಮಾನವಾಗುವುದರಿಂದ ಇಬ್ಬರ ನಡುವಿನ ಬಾಂಧವ್ಯ ಉಳಿದು ವಿವಾದ ತೀರ್ಮಾನವಾಗಲಿದೆ. ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಸಂಪೂರ್ಣ ಮೊತ್ತ ಮರು ಪಾವತಿ ಮಾಡಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದಾಗಿದೆ. ಜತೆಗೆ, ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಕೂಡ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶವಿರಲಿದೆ ಎಂದು ಅವರು ವಿವರಿಸಿದರು.
ಸಂಚಾರ ನಿಯಮ ಉಲ್ಲಂಘನೆ.. ಶೇ.50 ರಿಯಾಯಿತಿ ಸೆ.9ಕ್ಕೆ ಅಂತ್ಯ: ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಬಾಕಿ ಇರುವ ಪ್ರಕರಣಗಳಿಗೆ ಶೇ.50 ರಷ್ಟು ರಿಯಾಯಿತಿ ದರದಲ್ಲಿ ಶುಲ್ಕ ಪಾವತಿ ಮಾಡುವುದಕ್ಕೆ ನೀಡಿದ್ದ ಅವಕಾಶ ಇದೇ ಸೆ.9ಕ್ಕೆ ಅಂತ್ಯಗೊಳ್ಳಲಿದೆ. ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರ ಸೂಚನೆ ಮೇರೆಗೆ ರಿಯಾಯಿತಿ ಶುಲ್ಕ ಪಾವತಿಗೆ ಸರ್ಕಾರ ಆದೇಶ ನೀಡಿತ್ತು. ಈ ಆದೇಶವನ್ನು ಈಗಾಗಲೇ ಎರಡು ಬಾರಿ ವಿಸ್ತರಣೆ ಮಾಡಲಾಗಿದೆ. ಆದ್ದರಿಂದ ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಮೊತ್ತ ಬಾಕಿ ಉಳಿಸಿಕೊಂಡಿರುವವರು ತಕ್ಷಣ ಪಾವತಿ ಮಾಡಬಹುದಾಗಿದೆ ಎಂದು ಅವರು ವಿವರಿಸಿದರು.
ಅದಾಲತ್‌ನಲ್ಲಿ ಇತ್ಯರ್ಥವಾಗಬಹುದಾದ ವ್ಯಾಜ್ಯ ಪೂರ್ವ ಪ್ರಕರಣಗಳು: ಚೆಕ್ ಅಮಾನ್ಯದ ಪ್ರಕರಣಗಳು(ಚೆಕ್ ಬೌನ್ಸ್), ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಮತ್ತು ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು ಅದಾಲತ್‌ನಲ್ಲಿ ಇತ್ಯರ್ಥಪಡಿಸಬಹುದು.
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು: ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರ್ ಅಪಘಾತ ಪರಿಹಾರ ನ್ಯಾಯಾಧೀಕರಣ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು, ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಇಲ್ಲಿ ಇತ್ಯರ್ಥಪಡಿಸಬಹುದು.
ಇದನ್ನೂ ಓದಿ : ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದಿಂದ ನಾನು ಹಿಂದೆ ಸರಿದಿಲ್ಲ: ವಿನಯ್ ಕುಲಕರ್ಣಿ