ಬೆಂಗಳೂರು: ಕರ್ಫ್ಯೂ ಹಿನ್ನೆಲೆ ಬಿಪಿಎಲ್ ಕುಟಂಬಗಳಿಗೆ ಪಡಿತರವನ್ನು ಅವರ ಮನೆ ಬಾಗಿಲಿಗೆ ತಲುಪಿಸವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ವಕೀಲ ಎಲ್.ರಮೇಶ್ ನಾಯಕ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ರಜಾ ಕಾಲದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಅರ್ಜಿ ಕುರಿತಂತೆ ಕೆಲಕಾಲ ವಾದ ಆಲಿಸಿದ ಪೀಠ, ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು. ಅಲ್ಲದೇ ಈ ಅರ್ಜಿಯನ್ನು ಕೋವಿಡ್ ನಿಯಂತ್ರಣ ಮತ್ತು ಚಿಕಿತ್ಸೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠಕ್ಕೆ ವರ್ಗಾಯಿಸಿತು.
ಅರ್ಜಿದಾರರ ಕೋರಿಕೆ:
ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ನ್ಯಾಯಬೆಲೆ ಅಂಗಡಿಗಳ ಮುಂದೆ ಜನಸಂದಣಿ ಸೇರುವುದನ್ನು ತಪ್ಪಿಸಲು ರಾಜ್ಯದ 1.47 ಕೋಟಿ ಬಿಪಿಎಲ್ ಕುಟುಂಬಗಳಿಗೆ ಪಡಿತರವನ್ನು ಅವರ ಮನೆ ಬಾಗಿಲಿಗೆ ತಲುಪಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ. ಇದರ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.