ಬೆಂಗಳೂರು: ನಗರದ ಸಂಡೇ ಬಜಾರ್ ಬಳಿ ವಾಸಿಸುತ್ತಿದ್ದ ವಲಸೆ ಕಾರ್ಮಿಕರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಹೆಚ್ಚಿಸಲು ಸಿದ್ಧವೆಂದು ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲೆ ವೈಶಾಲಿ ಹೆಗಡೆ ಬರೆದ ಪತ್ರ ಆಧರಿಸಿ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದ್ದಾರೆ. ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ವಿಕ್ರಮ್ ಹುಯಿಲ್ಗೋಳ ಅವರು ವಾದ ಮಂಡಿಸಿ, ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಮೊತ್ತ ಹೆಚ್ಚಿಸಬೇಕು ಎಂದು ಸರ್ಕಾರದ ಮಟ್ಟದಲ್ಲಿ ತೀರ್ಮಾನಿಸಲಾಗಿದೆ ಎಂದರು. ಹೇಳಿಕೆ ದಾಖಲಿಸಿಕೊಂಡ ಪೀಠ, ಸರ್ಕಾರ ಕೈಗೊಂಡಿರುವ ತೀರ್ಮಾನದ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿ, ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ:
ನಗರದ ಸಂಡೇ ಬಜಾರ್ ಎಂದು ಕರೆಯಲ್ಪಡುವ ಕಾಚರಕನಹಳ್ಳಿ ಬಳಿಯ ಕೊಳೆಗೇರಿಯಲ್ಲಿದ್ದ ಕಲಬುರಗಿ ಮೂಲದ ಕಾರ್ಮಿಕರ ಗುಡಿಸಲುಗಳಿಗೆ ಲಾಕ್ ಡೌನ್ ಸಂದರ್ಭದಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಕುರಿತು ಪೊಲೀಸರು ಕ್ರಮ ಜರುಗಿಸುವಲ್ಲಿ ವಿಳಂಬ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ವಕೀಲೆ ವೈಶಾಲಿ ಹೆಗಡೆ ಸಂತ್ರಸ್ತ ಕಾರ್ಮಿಕರಿಗೆ ನ್ಯಾಯ ದೊರಕಿಸಿಕೊಡಲು ಕ್ರಮ ಜರುಗಿಸುವಂತೆ ಮನವಿ ಮಾಡಿ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದರು.
ಪತ್ರವನ್ನೇ ಪಿಐಎಲ್ ಆಗಿ ಪರಿಗಣಿಸಿ ವಿಚಾರಣೆ ನಡೆಸಿದ್ದ ಹೈಕೋರ್ಡ್ಗೆ ಮಾಹಿತಿ ನೀಡಿದ್ದ ಸರ್ಕಾರ, ಘಟನೆಯಲ್ಲಿ ಮನೆ ಕಳೆದುಕೊಂಡಿರುವ ಸಂತ್ರಸ್ತ ಕುಟುಂಬಗಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ರಾಜ್ಯ ವಿಪತ್ತು ನಿಧಿಯಿಂದ ಪರಿಹಾರ ಕೊಡಲಾಗುತ್ತಿದೆ. ಮನೆ ಹಾನಿಗೆ 4,100 ರೂ. ಮತ್ತು ಗೃಹ ಬಳಕೆ ವಸ್ತುಗಳ ನಾಶಕ್ಕೆ 2,000 ರೂ. ಸೇರಿ ಒಂದು ಕುಟುಂಬಕ್ಕೆ ಒಟ್ಟು 6,100 ರೂ. ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿತ್ತು. ಸರ್ಕಾರದ ಹೇಳಿಕೆ ಒಪ್ಪದ ವಿಭಾಗೀಯ ಪೀಠ, ಪರಿಹಾರ ಮೊತ್ತ ಹೆಚ್ಚಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತೆ ನಿರ್ದೇಶಿತ್ತು.