ಬೆಂಗಳೂರು : ನಗರದ 8 ಸಿಇಎನ್ (ಸೈಬರ್, ಎಕನಾಮಿಕ್ಸ್ ಹಾಗೂ ನಾರ್ಕೋಟಿಕ್) ಪೊಲೀಸ್ ಠಾಣೆಗಳಿಗೆ ಅಗತ್ಯ ವಾಹನಗಳನ್ನು ಖರೀದಿಸಲು ಟೆಂಡರ್ ಕರೆಯಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಸಿಇಎನ್ ಪೊಲೀಸ್ ಠಾಣೆಗಳಿಗೆ ಅಗತ್ಯ ಪ್ರಮಾಣದಲ್ಲಿ ಸಿಬ್ಬಂದಿ ಹಾಗೂ ಮೂಲಸೌಕರ್ಯ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ನಗರದ ವಕೀಲೆ ಸುಧಾ ಕಾಟ್ವ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು, ಸಿಇಎನ್ ಪೊಲೀಸ್ ಠಾಣೆಗಳಿಗೆ ಅಗತ್ಯ ವಾಹನ ಖರೀದಿಸಲು ಟೆಂಡರ್ ಕರೆಯಲಾಗಿದೆ. ಅಗತ್ಯ ಹುದ್ದೆಗಳ ಸೃಜನೆ ಮತ್ತು ನೇಮಕಾತಿಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸರ್ಕಾರಕ್ಕೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ವಕೀಲರ ಹೇಳಿಕೆ ದಾಖಲಿಸಿಕೊಂಡ ಪೀಠ, ಟೆಂಡರ್ ಪ್ರಕ್ರಿಯೆಯ ಮುಂದಿನ ಮಾಹಿತಿ, ಸಿಇಎನ್ ಪೊಲೀಸ್ ಠಾಣೆಗಳಿಗೆ ಇತರೆ ಮೂಲಸೌಕರ್ಯ, ಅಗತ್ಯ ತಾಂತ್ರಿಕ ಸಿಬ್ಬಂದಿ ನೇಮಕ ಮತ್ತಿತರ ವಿಚಾರಗಳಿಗೆ ಸಂಬಂಧಿಸಿದ ಪ್ರಗತಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಸೆ.3ಕ್ಕೆ ಮುಂದೂಡಿತು.
ಅರ್ಜಿದಾರರ ಮನವಿ : ಬೆಂಗಳೂರು ನಗರ ವ್ಯಾಪ್ತಿಯಲ್ಲಿ ನಡೆಯುವ ಸೈಬರ್, ಎಕನಾಮಿಕ್ಸ್ ಹಾಗೂ ನಾರ್ಕೋಟಿಕ್ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳ ತ್ವರಿತ ವಿಚಾರಣೆಗೆ 8 ಸಿಇಎನ್ ಪೊಲೀಸ್ ಠಾಣೆಗಳನ್ನು 2020ರ ಜೂನ್ ತಿಂಗಳಲ್ಲಿ ಸ್ಥಾಪಿಸಲಾಗಿದೆ. ಆದರೆ, ಈ ಠಾಣೆಗಳಿಗೆ ಅಗತ್ಯ ಪ್ರಮಾಣದಲ್ಲಿ ಸಿಬ್ಬಂದಿ ಹಾಗೂ ಮೂಲಸೌಕರ್ಯಗಳನ್ನು ಒದಗಿಸಿಲ್ಲ.
ಒಂದು ಠಾಣೆಗೆ ಕನಿಷ್ಠ 30 ಸಿಬ್ಬಂದಿ ಅಗತ್ಯವಿದೆ. ಆದರೆ, ಸದ್ಯ ನಿಯೋಜನೆ ಮೇರೆಗೆ ಒಂದೊಂದು ಠಾಣೆಗೆ 8 ರಿಂದ 10 ಸಿಬ್ಬಂದಿ ಮಾತ್ರ ಒದಗಿಸಲಾಗಿದೆ. ಹೀಗಾಗಿ, ಅಗತ್ಯ ಸೌಲಭ್ಯ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.