ಬೆಂಗಳೂರು: ರಾಜ್ಯಾದ್ಯಂತ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 13ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ರಾಜ್ಯದ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಅವಧಿಯಲ್ಲಿ ಭಾರಿ ಮಳೆಯಾಗಲಿದೆ, ಹೀಗಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 45 ರಿಂದ 55 ಕಿ.ಮೀ ಇರಲಿದ್ದು, 65 ಕಿ.ಮೀ ವರೆಗೂ ತಲುಪುವ ಸಾಧ್ಯತೆಯೂ ಇದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಜುಲೈ 14ರವರೆಗೆ ಮಾತ್ರ ಹಾಸನ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಮಾಹಿತಿ ನೀಡಿದೆ. ಉತ್ತರ ಒಳನಾಡಿನಲ್ಲಿ ಕೂಡ ಮಳೆ ಬೀಳಲಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಇರಲಿದೆ.
ಇದನ್ನೂ ಓದಿ: ಮೇಘಸ್ಫೋಟದಿಂದ ಸ್ಥಗಿತಗೊಂಡ ಅಮರನಾಥ ಯಾತ್ರೆ ಪುನರಾರಂಭ; ದರ್ಶನ ಭಾಗ್ಯಕ್ಕೆ ಭಕ್ತರ ಕಾತರ