ಬೆಂಗಳೂರು: ಕರಾವಳಿ ಸೇರಿದಂತೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿಡದೇ ಸುರಿಯುತ್ತಿದ್ದ ಮಳೆ ಕೊಂಚ ಬಿಡುವು ನೀಡಿದ್ದು, ರಾಜ್ಯದಲ್ಲಿ ಮಳೆಯ ಪ್ರಮಾಣ ಇಳಿಕೆ ಕಂಡಿದೆ.
ಈ ಕುರಿತಂತೆ ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದು, ನೈರುತ್ಯ ಮುಂಗಾರು ರಾಜ್ಯಾದ್ಯಂತ ಬುಧವಾರ ದುರ್ಬಲವಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ ಎಂದರು.
ಉತ್ತರ ಕನ್ನಡದ ಪಣಂಬೂರು ಮತ್ತು ಕದ್ರಾದಲ್ಲಿ ತಲಾ 3 ಸೆಂಮೀ., ಉಡುಪಿಯ ಕೋಟ, ಸಿದ್ದಾಪುರ, ಶಿವಮೊಗ್ಗದ ಆಗುಂಬೆಯಲ್ಲಿ ತಲಾ 2 ಸೆಂಮೀ., ಮಂಗಳೂರು, ದಕ್ಷಿಣ ಕನ್ನಡದ ವಿಟ್ಲ, ಬಳ್ಳಾರಿಯ ಕಂಪ್ಲಿ ಹಾಗೂ ಹೊಸಪೇಟೆಯಲ್ಲಿ ತಲಾ 1 ಸೆಂಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದರು.
ಓದಿ: ರಾಜ್ಯದಲ್ಲಿ ಉದ್ಯಮಶೀಲತೆ ವಿಸ್ತರಣೆಯೇ ನಮ್ಮ ಗುರಿ: ಸಿಎಂ ಬಸವರಾಜ ಬೊಮ್ಮಾಯಿ
ಆ.1 ರಿಂದ 15ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಕೆಲವೆಡೆ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದರು.
ಸಿಲಿಕಾನ್ ಸಿಟಿಯಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆ:
ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ತಿಳಿಸಿದರು.