ಬೆಂಗಳೂರು: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ವಿಚಾರಣೆ ನಡೆಸಲು ರಾಜ್ಯದ 17 ಜಿಲ್ಲೆಗಳಲ್ಲಿ ಸ್ಥಾಪಿಸಲಾಗಿರುವ ಮಕ್ಕಳ ಸ್ನೇಹಿ ನ್ಯಾಯಾಲಯಗಳಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರ ಹೈಕೋರ್ಟ್‍ಗೆ ಹೇಳಿದೆ.
ರಾಜ್ಯದಲ್ಲಿ ಪೊಕ್ಸೋ ಪ್ರಕರಣಗಳ ನಿಯಂತ್ರಣ ಕುರಿತಂತೆ ಬಚಪನ್ ಬಚಾವೋ ಆಂದೋಲನ್ ಹಾಗೂ ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.
ಅದೇ ರೀತಿ ಮಕ್ಕಳ ಸಮಗ್ರ ಸಂರಕ್ಷಣಾ ಯೋಜನೆಗೆ 2019-20ನೇ ಸಾಲಿನಲ್ಲಿ 78.38 ಕೋಟಿ ರೂ. ಹಾಗೂ 2020-21ನೇ ಸಾಲಿನಲ್ಲಿ 91.30 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಮಕ್ಕಳ ಸುರಕ್ಷತೆ ಮತ್ತು ಸಂರಕ್ಷಣೆ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕಾಗಿ 2016ರಲ್ಲಿ "ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ'ಯನ್ನು ಜಾರಿಗೆ ತರಲಾಗಿದೆ ಎಂದು ಸರ್ಕಾರ ಹೇಳಿದೆ.
ಅಲ್ಲದೇ, 2018ರಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿದ್ದಪಡಿಸಿದ್ದ ವರದಿ ಆಧರಿಸಿ ರಾಜ್ಯದ ಹಲವು ಮಕ್ಕಳ ಆರೈಕೆ ಕೇಂದ್ರಗಳಲ್ಲಿ ಮಕ್ಕಳನ್ನು ಲೈಂಗಿಕ ಚಿತ್ರಗಳಿಗೆ ಬಳಸಿಕೊಂಡಿರುವ ಪ್ರಕರಣಗಳ ತನಿಖೆ ನಡೆಸಲಾಗುತ್ತಿದೆ. ಈವರೆಗೆ ರಾಜ್ಯದಲ್ಲಿ 113 ಪ್ರಕರಣಗಳು ವರದಿಯಾಗಿವೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಒಟ್ಟು 11 ಎಫ್‍ಐಆರ್‌ಗಳನ್ನು ದಾಖಲಿಸಲಾಗಿದೆ. ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು ತನಿಖೆಯನ್ನು ಸಿಐಡಿ ಗೆ ವಹಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‍ಗೆ ಮಾಹಿತಿ ನೀಡಿದೆ.