ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಎರಡು ದಿನಗಳಲ್ಲಿ ವರದಿ ನೀಡುವಂತೆ ನಮ್ಮ ಎಲ್ಲ ಶಾಸಕರಿಗೆ ಪತ್ರ ಬರೆದಿದ್ದೇನೆ. ನಂತರ ಮೇ 20ರಂದು ಎಲ್ಲ ಶಾಸಕರು ಮತ್ತು ಸಂಸದರ ಸಭೆ ಕರೆದು ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ನಿರ್ವಹಣೆ ವಿಷಯದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸಿಎಂ ಕುಮಾರಸ್ವಾಮಿಯವರು ಸಂಸದರು ಮತ್ತು ಪ್ರತಿಪಕ್ಷ ನಾಯಕರ ಸಭೆ ಕರೆದು ಚರ್ಚಿಸಬಹುದಿತ್ತು. ಆದರೆ ಆ ಕೆಲಸ ಮಾಡಿಲ್ಲ. ಸಮಸ್ಯೆಗಳಿಗೂ ಅವರು ಸ್ಪಂದಿಸುತ್ತಿಲ್ಲ ಎಂದರು.
ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅವರು ಹಾಸನ ಜಿಲ್ಲಾಧಿಕಾರಿ ವಿರುದ್ಧ ಸೇಡಿನ ರಾಜಕೀಯ ಮಾಡಲು ಹೊರಟಿದ್ದಾರೆ. ಬರ ಪರಿಹಾರ ಕಾಮಗಾರಿಗೆ ಜಿಲ್ಲಾಧಿಕಾರಿ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ಅವರ ವರ್ಗಾವಣೆಗೆ ಯತ್ನಿಸುತ್ತಿದ್ದಾರೆ. ಇದು ಒಬ್ಬ ಪ್ರಾಮಾಣಿಕ ಅಧಿಕಾರಿಗೆ ಮಾಡುತ್ತಿರುವ ಅವಮಾನ. ಇದನ್ನು ನಾವು ಖಂಡಿಸುತ್ತೇವೆ ಎಂದರು.
ಬೇಹುಗಾರಿಕೆ ಮಾಡಿದರೆ ಮಾಡಿಕೊಳ್ಳಲಿ:
ನನ್ನ ವಿರುದ್ಧ ಸಿಎಂ ಕುಮಾರಸ್ವಾಮಿ ಬೇಹುಗಾರಿಕೆ ಮಾಡುತ್ತಿದ್ದಾರಂತೆ. ಮಾಡಿದರೆ ಮಾಡಿಕೊಳ್ಳಲಿ. ಅದರಿಂದ ಅವರಿಗೆ ಏನೂ ಸಿಗುವುದಿಲ್ಲ. ನಾನು ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನದೆಲ್ಲಾ ಓಪನ್ ಸೀಕ್ರೆಟ್. ಮುಚ್ಚಿಡುವಂತದ್ದು ಏನೂ ಇಲ್ಲ ಎಂದು ಯಡಿಯೂರಪ್ಪ ಟಾಂಗ್ ನೀಡಿದರು.
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂಬ ಒತ್ತಾಯ ಕೇಳಿ ಬರುತ್ತಿರುವುದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಬಿಎಸ್ವೈ, ತಾವೇ ಯಡಿಯೂರಪ್ಪ ಉತ್ತರಾಧಿಕಾರಿ ಎಂಬ ಯತ್ನಾಳ್ ಹೇಳಿಕೆಗೂ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.