ಬೆಂಗಳೂರು : ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಯುವ ವಕೀಲರಿಗೆ ಪಾವತಿಸಬೇಕಿರುವ ಬಾಕಿ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆಗೊಳಿಸಲು, ಸಂಬಂಧಿಸಿದ ಇಲಾಖೆಗೆ ಸೂಚಿಸುವಂತೆ ಕೋರಿ ವಕೀಲ ವೆಂಕಟೇಶ್ ದೊಡ್ಡೇರಿ ಅವರು ಸಂಸದ ಎ. ನಾರಾಯಣಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಎಸ್ ಸಿ, ಎಸ್ ಟಿ ಮತ್ತು ಹಿಂದುಳಿದ ವರ್ಗಗಳ ಯುವ ವಕೀಲರಿಗೆ ನೀಡುವ ಪ್ರೋತ್ಸಾಹ ಧನವನ್ನು ಕಳೆದ ಆರು ತಿಂಗಳಿಂದ ಬಿಡುಗಡೆಗೊಳಿಸಿಲ್ಲ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಎ.ನಾರಾಯಣಸ್ವಾಮಿ ಅವರನ್ನು ಭೇಟಿ ಮಾಡಿದ ಹೈಕೋರ್ಟ್ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ದೊಡ್ಡೇರಿ ಹಾಗೂ ಸಮುದಾಯದ ಮುಖಂಡರು, ಇಲಾಖೆ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆಗೊಳಿಸಲು ಸರ್ಕಾರಕ್ಕೆ ಒತ್ತಾಯಿಸಬೇಕು ಎಂದು ಕೋರಿದರು.
ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಮಾಡಿದ ಬಳಿಕ ಈವರೆಗೆ ಯುವ ವಕೀಲರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಸರ್ಕಾರ ನೀಡುತ್ತಿದ್ದ ಸ್ಟೈಫಂಡ್ 6 ತಿಂಗಳಿಂದ ಬಿಡುಗಡೆಯಾಗಿಲ್ಲ. ಕೆಲವೆಡೆ ವರ್ಷಕ್ಕೂ ಅಧಿಕ ಕಾಲದಿಂದ ಪ್ರೋತ್ಸಾಹ ಧನ ನೀಡಿಲ್ಲ. ಇದರಿಂದಾಗಿ ಯುವ ವಕೀಲರು ತಮ್ಮ ವೃತ್ತಿ ಮುಂದುವರೆಸಲು ಕಷ್ಟವಾಗುತ್ತಿದೆ. ಹೀಗಾಗಿ ಹಣ ಬಿಡುಗಡೆಗೆ ಸೂಚಿಸಬೇಕು ಎಂದು ಮನವಿ ಮಾಡಿದರು.
ಲಿಖಿತ ಮನವಿ ಸ್ವೀಕರಿಸಿದ ಸಂಸದರು, ಈ ಸಂಬಂಧ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.