ಬೆಂಗಳೂರು: ಸರ್ಕಾರದ ನೇಮಕಾತಿಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವ ಸಂಬಂಧ ಕರಡು ಸಿದ್ದಪಡಿಸಿದ್ದು, ಸದ್ಯದಲ್ಲೇ ಸಚಿವ ಸಂಪುಟದಲ್ಲಿ ಮಂಡಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಅಡ್ವೊಕೇಟ್ ಜನರಲ್ ಹೈಕೋರ್ಟ್ಗೆ ಭರವಸೆ ನೀಡಿದ್ದಾರೆ.
ಈ ಕುರಿತು ಲೈಂಗಿಕ ಅಲ್ಪಸಂಂಖ್ಯಾತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸಂಗಮ ಸ್ವಯಂಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಮಾಹಿತಿ ನೀಡಿದ್ದು, ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ 2014ರ ಸುಪ್ರೀಂಕೋರ್ಟ್ ತೀರ್ಪು ಆಧರಿಸಿ ರಾಜ್ಯ ಸರ್ಕಾರದ 'ಟ್ರಾನ್ಸ್‌ಜೆಂಡರ್ ನೀತಿ-2017'ರ ಕರಡು ನಿಯಮಗಳನ್ನು ಸಿದ್ಧಪಡಿಸಲಾಗಿದೆ. ಕಳೆದ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಕರಡು ಮಂಡಿಸಲು ಉದ್ದೇಶಿಸಲಾಗಿತ್ತು. ಆದರೆ, ಸಂಪುಟ ಸಭೆ ನಡೆಯಲಿಲ್ಲ. ಹೀಗಾಗಿ, ಶೀಘ್ರವೇ ಸಚಿವ ಸಂಪುಟ ಸಭೆಯಲ್ಲಿ ಕರಡು ನಿಯಮಗಳನ್ನು ಮಂಡಿಸಲಾಗುವುದು ಎಂದು ವಿವರಿಸಿದರು.
ಈ ಹೇಳಿಕೆ ದಾಖಲಿಸಿಕೊಂಡ ಪೀಠ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ:
ರಾಜ್ಯದಲ್ಲಿ ಖಾಲಿಯಿರುವ 2420 ವಿಶೇಷ ಮೀಸಲು ಪೇದೆಗಳ ಮತ್ತು 252 ಬ್ಯಾಂಡ್ಸ್ ಮೆನ್ ಹುದ್ದೆ ಸೇರಿದಂತೆ ಒಟ್ಟು 2672 ಹುದ್ದೆಗಳ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಲೈಂಗಿಕ ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಿಲ್ಲ. ಇದು ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆ. ಆದ್ದರಿಂದ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲು ಹಾಗೂ ಮೀಸಲಾತಿ ಯೋಜನೆ ರೂಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.