ಬೆಂಗಳೂರು: ಮುಳ್ಳಯ್ಯನಗಿರಿ ಬೆಟ್ಟದ ವ್ಯಾಪ್ತಿಯಲ್ಲಿನ ರಸ್ತೆ ಅಗಲೀಕರಣಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಶೀಘ್ರವೇ ಕ್ರಮ ಕೈಗೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಈ ಕುರಿತು ಭದ್ರಾ ವನ್ಯಜೀವಿ ಸಂರಕ್ಷಣಾ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಮತ್ತು ನ್ಯಾಯಮೂರ್ತಿ ಹೆಚ್.ಟಿ. ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ಪೀಠದಲ್ಲಿ ನಡೆಯಿತು.
ಅರ್ಜಿದಾರರ ಪರ ವಾದಿಸಿದ ವಕೀಲರು ರಸ್ತೆ ಅಗಲೀಕರಣದಿಂದ ಪರಿಸರದ ಮೇಲೆ ಪರಿಣಾಮ ಬೀರಿ ಮುಳ್ಳಯ್ಯನಗಿರಿ ಬೆಟ್ಟದ ಸ್ವರೂಪ ಹಾಳಾಗುತ್ತಿದೆ. ಹೀಗಾಗಿ ಅಗಲೀಕರಣಕ್ಕೆ ತಡೆ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ರಾಜ್ಯ ಸರ್ಕಾರಕ್ಕೆ ಶೀಘ್ರವೇ ಕ್ರಮ ಕೈಗೊಳ್ಳಲು ನಿರ್ದೇಶಿಸಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.