ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ಅವಧಿ ಪೂರ್ವ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಐಎಎಸ್ ಅಧಿಕಾರಿ ಬಿ ಶರತ್ ಸಲ್ಲಿಸಿರುವ ಅರ್ಜಿ ಸಂಬಂಧ ವಾದ ಮಂಡಿಸಲು ರಾಜ್ಯ ಸರ್ಕಾರ ಕಾಲಾವಕಾಶ ಕೋರಿದ ಹಿನ್ನೆಲೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ವಿಚಾರಣೆಯನ್ನು ಅ.14ಕ್ಕೆ ಮುಂದೂಡಿದೆ.
ಇಂದು ನಡೆದ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಮಾಹಿತಿ ನೀಡಿ, ಅರ್ಜಿ ಸಂಬಂಧ ರಾಜ್ಯ ಸರ್ಕಾರದ ಪರ ಅಡ್ವೋಕೇಟ್ ಜನರಲ್ ವಾದ ಮಂಡಿಸಲಿದ್ದಾರೆ. ಹೀಗಾಗಿ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಸಿಎಟಿ ಪ್ರಕರಣದ ವಿಚಾರಣೆಯನ್ನು ಮುಂದೂಡಿತು.
ಪ್ರಕರಣದ ಹಿನ್ನೆಲೆ :
ಐಎಎಸ್ ಅಧಿಕಾರಿ ಬಿ. ಶರತ್ ಅವರನ್ನು ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ಆಗಸ್ಟ್ 28ರಂದು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ತಿಂಗಳು ತುಂಬುವ ಮುನ್ನವೇ ಯಾವುದೇ ಸೂಕ್ತ ಕಾರಣ ನೀಡದೆ ಈ ಜಾಗಕ್ಕೆ ರೋಹಿಣಿ ಸಿಂಧೂರಿಯವರನ್ನು ನಿಯೋಜಿಸಿ ಸರ್ಕಾರ ಆದೇಶಿಸಿದೆ. ಈ ವರ್ಗಾವಣೆ ಆದೇಶವನ್ನು ರದ್ದು ಪಡಿಸಬೇಕು ಎಂದು ಕೋರಿ ಬಿ ಶರತ್ ಸಿಇಟಿಗೆ ಅರ್ಜಿ ಸಲ್ಲಿಸಿದ್ದಾರೆ.