ಬೆಂಗಳೂರು: ನಗರದಲ್ಲಿ ಹೆಚ್ಚು ಸಂಚಾರ ದಟ್ಟಣೆ ಇರುವ ರಸ್ತೆಗಳಲ್ಲಿ ಬನ್ನೇರುಘಟ್ಟ ರಸ್ತೆಯು ಒಂದು. ಅದ್ರಲ್ಲೂ ಈಗ ಮೆಟ್ರೋ ಕಾಮಗಾರಿ ಪ್ರಗತಿಯಲ್ಲಿರುವ ಕಾರಣ ಈ ರಸ್ತೆಯಲ್ಲಿ ಪ್ರಯಾಣಿಸುವ ವಾಹನ ಸವಾರರ ಪಾಡು ಆ ದೇವರಿಗೆ ಪ್ರೀತಿ ಎಂಬಂತಾಗಿದೆ.
ಇದೀಗ ಮೇಟ್ರೋ ನಿಲ್ದಾಣ ನಿರ್ಮಿಸುವ ಸಲುವಾಗಿ 21 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಜಯದೇವ ಫ್ಲೈಓವರ್ ಧ್ವಂಸ ಕಾರ್ಯವನ್ನು ಬಿಎಂಆರ್‌ಸಿಎಲ್ ಶುರು ಮಾಡಿದ್ದು, ಸುತ್ತಮುತ್ತಲಿನ ಬಹುತೇಕ ರಸ್ತೆಗಳು ವಾಹನಗಳಿಂದ ತುಂಬಿ ತುಳುಕುತ್ತಿವೆ. ಇದರಿಂದಾಗಿ ಬಿಟಿಎಂ ಲೇಔಟ್ ನಿವಾಸಿಗಳು ಸೇರಿದಂತೆ ಈ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಪರದಾಡುವಂತಾಗಿದೆ.
ಜಯದೇವ ಜಂಕ್ಷನ್ ನಲ್ಲಿ ಎರಡು ಮಾರ್ಗಗಳ ಸಂಪರ್ಕ ಕಲ್ಪಿಸುವ ನಿಲ್ದಾಣ ನಿರ್ಮಾಣವಾಗುತ್ತಿದ್ದು, ಗೊಟ್ಟಿಗೆರೆಯಿಂದ ನಾಗವಾರ ಮತ್ತು ಆರ್ ವಿ ರಸ್ತೆಯಿಂದ ಬೊಮ್ಮಸಂದ್ರವರೆಗಿನ ಮೆಟ್ರೋ ಕಾಮಗಾರಿಗಳು ಪ್ರಗತಿಯಲ್ಲಿವೆ.
ಇದರಿಂದಾಗಿ ವಾಹನ ಸಂಚಾರಕ್ಕೆ ಕೆಲವೊಂದು ಮಾರ್ಗ ಬದಲಾವಣೆ ಮಾಡಲಾಗಿದ್ದು, ಮೆಟ್ರೋ ಕಾಮಗಾರಿ ಪೂರ್ಣಗೊಳ್ಳುವವರೆಗೂ ಈ ಭಾಗದಲ್ಲಿ ಸಂಚರಿಸುವ ವಾಹನ ಸವಾರರು ಮತ್ತು ಸ್ಥಳೀಯ ನಿವಾಸಿಗಳು ಪರದಾಡುವಂತಾಗಿದೆ.