ಬೆಂಗಳೂರು: ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಕುಮಾರ ಕೊಲೆಗೆ ಯತ್ನಿಸಿದ ಪ್ರಕರಣದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಆರೋಪಿ ಮಹೇಶ್ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣದಲ್ಲಿ ಜಾಮೀನು ನೀಡಬೇಕು ಎಂದು ಕೋರಿ ಆರೋಪಿ ಮಹೇಶ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಪ್ರಕರಣದಲ್ಲಿ ಮಹೇಶ್ ಅವರನ್ನು ಪೊಲೀಸರು ಅನಗತ್ಯವಾಗಿ ಸಿಲುಕಿಸಿದ್ದಾರೆ. ಇದಕ್ಕೂ ಮೊದಲು ಅವರನ್ನು ಅಕ್ರಮವಾಗಿ ಬಂಧಿಸಿಟ್ಟಿದ್ದರು. ಹೈಕೋರ್ಟ್ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ ಬಳಿಕ ಪೊಲೀಸರು ಕೋರ್ಟಿಗೆ ಹಾಜರುಪಡಿಸಿದ್ದರು. ಗಾಯಾಳು ಕುಮಾರ್ ಪೊಲೀಸರು ಸೇರಿದಂತೆ ಎಲ್ಲಿಯೂ ಮಹೇಶ್ ವಿರುದ್ಧ ಆರೋಪಿಸಿಲ್ಲ. ಹೀಗಾಗಿ, ಜಾಮೀನು ನೀಡಬೇಕು ಎಂದು ಕೋರಿದರು.
ವಕೀಲರ ವಾದ ಪುರಸ್ಕರಿಸಿದ ಪೀಠ ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು. 50,000 ರೂ. ಮೊತ್ತದ ವೈಯಕ್ತಿಕ ಬಾಂಡ್, ಅಷ್ಟೇ ಮೊತ್ತಕ್ಕೆ ಇಬ್ಬರು ವ್ಯಕ್ತಿಗಳ ಭದ್ರತೆ, ಸಾಕ್ಷಿ ನಾಶ ಪಡಿಸಬಾರದು, ತನಿಖಾಧಿಕಾರಿಗಳಿಗೆ ಸಹಕಾರ ನೀಡಬೇಕು ಎಂಬ ಷರತ್ತುಗಳನ್ನು ವಿಧಿಸಿದೆ. ವಿಚಾರಣಾ ನ್ಯಾಯಾಲಯದ ಅನುಮತಿ ಇಲ್ಲದೆ ಕ್ಷೇತ್ರದಿಂದ ಹೊರ ಹೋಗಬಾರದು ಎಂಬ ಎಚ್ಚರಿಕೆ ಸಹ ನೀಡಿತು.
ಪ್ರಕರಣದ ಹಿನ್ನೆಲೆ:
2020ರ ಫೆಬ್ರವರಿ 27ರಂದು ಮಂಡ್ಯ ಜಿಲ್ಲೆ ಕೆಆರ್ ಪೇಟೆ ಬಳಿಯ ಸಂತೆಬಾಚಳ್ಳಿ ರಸ್ತೆಯಲ್ಲಿ ರೌಡಿಶೀಟರ್ ಕುಮಾರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕುಮಾರ್ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು. ಈ ಘಟನೆ ಕುರಿತು ಸಂದೀಪ್ ಎಂಬಾತ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಆರೋಪಿ ಮಹೇಶ್ ಅವರನ್ನು ವಶಕ್ಕೆ ಪಡೆದಿದ್ದ ಕೆ.ಆರ್. ಪೇಟೆ ಠಾಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.