ಬೆಂಗಳೂರು: ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಮತದಾರರಿಗೆ ಹಣ ಆಮಿಷ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಪರಸ್ಪರ ಯಶವಂತಪುರ ಪೊಲೀಸರಿಗೆ ದೂರು ನೀಡಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಕೊಟ್ಟ ದೂರಿನನ್ವಯ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ.
![FIR Against munirathna](https://etvbharatimages.akamaized.net/etvbharat/prod-images/kn-bng-06-munirathna-fir-script-7202806_26102020235539_2610f_1603736739_1086.png)
ತನಗೆ ಮತ ಹಾಕಿದರೆ 5 ಸಾವಿರ ರೂ. ನೀಡುವುದಾಗಿ ಮತದಾರರಿಗೆ ಆಮಿಷವೊಡ್ಡುತ್ತಿದ್ದಾರೆ ಎಂದು ಅಪಾದಿಸಿ ದೂರು ಕೊಟ್ಟ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಗಂಭೀರ ಸ್ವರೂಪವಲ್ಲದ ಅಪರಾಧ (ಎನ್ಸಿಆರ್) ದಾಖಲಿಸಿಕೊಂಡಿದ್ದರು. ಬೆಂಗಳೂರು ಎಸಿಎಂಎಂ ನ್ಯಾಯಾಲಯದ ಸೂಚನೆ ಮೇರೆಗೆ ಮುನಿರತ್ನ ಹಾಗೂ ಆತನ ಬೆಂಬಲಿಗರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
![FIR Against munirathna](https://etvbharatimages.akamaized.net/etvbharat/prod-images/kn-bng-06-munirathna-fir-script-7202806_26102020235539_2610f_1603736739_495.png)
ಇದರ ಮಧ್ಯೆ ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ಹಾಗೂ ಅವರ ಬೆಂಬಲಿಗರು ಕ್ಷೇತ್ರದಲ್ಲಿ ಮತದಾರರಿಂದ ಗುರುತಿನ ಚೀಟಿ ಹಾಗೂ ಫೋನ್ ನಂಬರ್ ಸಂಗ್ರಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಿದರೆ ಹಣ ನೀಡುವುದಾಗಿ ಆಮಿಷವೊಡ್ಡಿದ್ದು, ಪ್ರಶ್ನಿಸಿದ್ದಕ್ಕೆ ಅವಾಚ್ಯವಾಗಿ ನಿಂದಿಸಿದ್ದಾರೆಂದು ಆರೋಪಿಸಿ ಬಿಜೆಪಿ ಕಾರ್ಯಕರ್ತ ಪುನೀತ್ ಕುಮಾರ್ ದೂರು ಕೊಟ್ಟಿದ್ದರು. ನ್ಯಾಯಾಲಯದ ಸೂಚನೆ ಮೇರೆಗೆ ನಾರಾಯಣಸ್ವಾಮಿ ಮತ್ತು ಬೆಂಬಲಿಗರ ವಿರುದ್ಧ ಕೂಡ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.