ಬೆಂಗಳೂರು: ಆರ್.ಆರ್. ನಗರ ಉಪ ಚುನಾವಣೆ ವೇಳೆ ಕಾಂಗ್ರೆಸ್ ಪ್ರಚಾರಕ್ಕೆ ತಡೆ ಮಾಡಿದ ಆರೋಪದ ಮೇರೆಗೆ ಮಾಜಿ ಕಾರ್ಪೋರೇಟರ್ ಜಿ.ಕೆ.ವೆಂಕಟೇಶ್ ಸೇರಿ 9 ಮಂದಿ ವಿರುದ್ಧ ಯಶವಂತಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸ್ತಿದ್ರು. ಈ ವೇಳೆ ಏಕಾಏಕಿ ಬಂದ ಜಿ.ಕೆ.ವೆಂಕಟೇಶ್, ಭರತ್ ಸಿಂಗ್, ಕೊತ್ತಂಬರಿ ನಾಗ, ಖಾಜಾ, ರತ್ನಮ್ಮ ಇತರೆ ಹಲವಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರ ಪ್ರಚಾರಕ್ಕೆ ಅಡ್ಡಿ ಮಾಡಿದಲ್ಲದೆ ಹಲ್ಲೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.
ಸದ್ಯ ಆರ್.ಆರ್. ನಗರ ಉಪ ಕದನ ರಂಗೇರಿರುವ ಕಾರಣ ಹಿರಿಯಾಧಿಕಾರಿಗಳು ಕೂಡ ಯಾವುದೇ ಅಹಿತಕರ ಘಟನೆ ನಡೆಯದ ಹಾಗೆ ಎರಡೂ ಪಕ್ಷದ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಿದ್ದಾರೆ.
ಘಟನೆ ಬೆಳಕಿಗೆ ಬಂದ ತಕ್ಷಣ ಉತ್ತರ ವಿಭಾಗ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಅವರ ನೇತೃತ್ವದಲ್ಲಿ ಖಾಕಿ ಕಣ್ಗಾವಲು ಹಾಕಲಾಗಿದೆ. ಸದ್ಯ ನಿನ್ನೆ ಸಿದ್ದರಾಮಯ್ಯ ಪ್ರಚಾರದ ವೇಳೆ ಅಡ್ಡಿಪಡಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ 506, 341 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.