ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಹಾಗೂ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಶಿರಾ ಹಾಗೂ ರಾಜರಾಜೇಶ್ವರಿ ನಗರದ ಉಪ ಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯಗೊಳ್ಳಲಿದೆ.
ನವೆಂಬರ್ 3ರಂದು ಎರಡು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, 10ರಂದು ಫಲಿತಾಂಶ ಹೊರಬರಲಿದೆ. ನಾಳೆ ಮತ್ತು ನಾಡಿದ್ದು ಮನೆ ಮನೆಗಳಿಗೆ ತೆರಳಿ ಪ್ರಚಾರ ನಡೆಸಲು ಅವಕಾಶವಿದೆ. ನಿನ್ನೆ ಶಿರಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ರಾಜರಾಜೇಶ್ವರಿ ನಗರದಲ್ಲಿ ತಮ್ಮ ಅಭ್ಯರ್ಥಿ ಮುನಿರತ್ನ ಪರ ಪ್ರಚಾರ ನಡೆಸಲಿದ್ದಾರೆ.
ಎರಡು ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಕೆಲ ಪಕ್ಷೇತರ ಅಭ್ಯರ್ಥಿಗಳು ತಮ್ಮ ರಾಜಕೀಯ ಭವಿಷ್ಯ ನಿರ್ಧರಿಸಿಕೊಳ್ಳಲು ಕಣಕ್ಕಿಳಿದಿದ್ದಾರೆ. ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ, ಜೆಡಿಎಸ್ ಅಭ್ಯರ್ಥಿಯಾಗಿ ವಿ. ಕೃಷ್ಣಮೂರ್ತಿ ಇದ್ದರೆ, ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ರಾಜೇಶ್ ಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ.ಜಯಚಂದ್ರ, ಜೆಡಿಎಸ್ ಅಭ್ಯರ್ಥಿಯಾಗಿ ಅಮ್ಮಾಜಮ್ಮ ಕಣಕ್ಕಿಳಿದಿದ್ದಾರೆ.
ರಾಜರಾಜೇಶ್ವರಿ ನಗರದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಇಂದು ಕೂಡ ಅಬ್ಬರದ ಪ್ರಚಾರ ನಡೆಸಲಿದ್ದು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಅನೇಕರು ಪ್ರಚಾರ ನಡೆಸಲಿದ್ದಾರೆ. ನಿನ್ನೆ ಮುನಿರತ್ನ ಪರ ಆರ್. ಆರ್. ನಗರ ಕ್ಷೇತ್ರದಲ್ಲಿ ನಟ ದರ್ಶನ್ ರೋಡ್ ಶೋ ನಡೆಸಿ ಮತಯಾಚಿಸಿದರು.