ಬೆಂಗಳೂರು : ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜರಾಜೇಶ್ವರಿನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಹೀಗಾಗಿ ಕೊನೆಯ ದಿನವಾದ ನಿನ್ನೆ ಭರ್ಜರಿ ಪ್ರಚಾರ ನಡೆಸಲಾಯಿತು.
ಮತದಾರ ಪ್ರಭುಗಳ ವಿಶ್ವಾಸಗಳಿಸಲು ಭಾರೀ ಕಸರತ್ತು ನಡೆಸಿ, ತಮ್ಮ ಅಭ್ಯರ್ಥಿಗಳಿಗೆ ವೋಟ್ ಹಾಕುವಂತೆ ಮನವಿ ಮಾಡಿದರು. ಎರಡು ಉಪಚುನಾವಣೆ ಸವಾಲಾಗಿ ಸ್ವೀಕರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮದೇ ರಣತಂತ್ರ ರೂಪಿಸಿದ್ದಾರೆ.
ಸಂಘಟನಾ ಸಾಮರ್ಥ್ಯ ಸಾಬೀತುಪಡಿಸಲು ಎರಡೂ ಕ್ಷೇತ್ರಗಳಲ್ಲಿ ಓಡಾಡಿ ಅಭ್ಯರ್ಥಿಗಳ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದು, ಅದರಲ್ಲೂ ಆರ್.ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ಗೆಲುವಿಗೆ ಪಣತೊಟ್ಟು ಕಾಂಗ್ರೆಸ್ ಮುಖಂಡರು ಮತದಾರರ ವಿಶ್ವಾಸಗಳಿಸಲು ಶ್ರಮಿಸಿದ್ದಾರೆ.
ರಾಜರಾಜೇಶ್ವರಿನಗರ ಮತ್ತು ಸಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಿನ್ನೆ ಸಂಜೆ ತೆರೆಬಿದ್ದಿದೆ. ಎರಡೂ ಕ್ಷೇತ್ರಗಳಲ್ಲೂ ಪ್ರಚಾರದ ಅಬ್ಬರ ತಾರಕಕ್ಕೇರಿತು. ಆರ್ ಆರ್ ನಗರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿನ್ನೆ ರೋಡ್ ಶೋ ನಡೆಸಿ ಪ್ರಚಾರಕ್ಕೆ ಮತ್ತಷ್ಟು ಕಾವು ನೀಡಿದ್ದರು. ಇವರಿಗೆ ಸಚಿವ ಆರ್. ಅಶೋಕ್ ಸೇರಿದಂತೆ ಹಲವು ಸಚಿವರು ಹಾಗೂ ನಾಯಕರು ಸಾಥ್ ನೀಡಿದರು.
ಇದರ ಮಧ್ಯೆ ಕಾಂಗ್ರೆಸ್ ಅಭ್ಯರ್ಥಿ ಪರ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸೇರಿದಂತೆ ಅನೇಕ ನಾಯಕರು ಕ್ಷೇತ್ರದಲ್ಲಿ ಸಂಚರಿಸಿ ಭರ್ಜರಿ ಪ್ರಚಾರ ನಡೆಸಿದ್ದರು.
ಜೆಡಿಎಸ್ ಪಕ್ಷದ ಅಭ್ಯರ್ಥಿ ವಿ. ಕೃಷ್ಣಮೂರ್ತಿ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಹ ಆರ್ ಆರ್ ನಗರ ಕ್ಷೇತ್ರದಲ್ಲಿ ರೋಡ್ ಶೋ, ಸಭೆಗಳನ್ನು ನಡೆಸುವ ಮೂಲಕ ಪ್ರಚಾರ ನಡೆಸಿದರು.
ಸಿರಾ ವಿಧಾನಸಭಾ ಕ್ಷೇತ್ರದಲ್ಲೂ ಪ್ರಚಾರದ ಅಬ್ಬರ ಜೋರಾಗಿದ್ದು, ಮೊನ್ನೆ ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ಪರ ಪ್ರಚಾರ ನಡೆಸಿದ್ದರು. ಹಾಗೆಯೇ ಜೆಡಿಎಸ್ ಪರ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಿರಾದಲ್ಲಿ ಪ್ರಚಾರ ನಡೆಸಿದ್ದರು. ನಿನ್ನೆ ಕೂಡ ಸಿರಾದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸಂಚರಿಸಿ ಮತಯಾಚಿಸಿದ್ದಾರೆ.