ಬೆಂಗಳೂರು: ಬರಪೀಡಿತ ಪ್ರದೇಶಗಳಲ್ಲಿನ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ರಾಜ್ಯ ಸರಕಾರ 40 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಬರಪೀಡಿತ ತಾಲೂಕುಗಳೆಂದು ಘೋಷಿಸಿರುವ 152 ತಾಲೂಕುಗಳ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಾದ ನಗರಪಾಲಿಕೆ, ನಗರಸಭೆ, ಪುರಸಭೆ ಹಾಗು ಪಟ್ಟಣ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಸಲು ಈ ಹಣ ಬಳಸಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ. ತೀವ್ರ ಬರಗಾಲ ಇರುವ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮೈಸೂರು, ಮಂಡ್ಯ, ಬಳ್ಳಾರಿ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬೆಳಗಾವಿ ಜಿಲ್ಲೆಗಳ 135 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುದಾನದ ಹಣ ಉಪಯೋಗಿಸಲು ಸೂಚಿಸಲಾಗಿದೆ.
ಪ್ರಸಕ್ತ ಹಣಕಾಸು ವರ್ಷದ ಎಸ್ಎಫ್ಸಿ ಪ್ರವೇಶ ತೆರಿಗೆ ಅವತರಣದಡಿ ಹಂಚಿಕೆ ಮಾಡಲಾಗಿದ್ದ 50 ಕೋಟಿ ರೂ.ಗಳ ಪೈಕಿ 40 ಕೋಟಿ ರೂಪಾಯಿ ಹಣವನ್ನು ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ನಗರಾಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿದೆ. ಈ ಅನುದಾನದ ಹಣವನ್ನು ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸನ್ನು ರಚಿಸಿಕೊಂಡು ಅಗತ್ಯವಿರುವ ಕಡೆ ಕ್ರಿಯಾಯೋಜನೆ ರೂಪಿಸಿಕೊಂಡು ಜಿಲ್ಲಾಧಿಕಾರಿಗಳ ಅನುಮೋದನೆಯೊಂದಿಗೆ ತುರ್ತಾಗಿ ಅನುಷ್ಟಾನಗೊಳಿಸಬೇಕು ಎಂದು ಸೂಚಿಸಲಾಗಿದೆ.
ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಕೊಳವೆ ಬಾವಿಗಳನ್ನು ಆಳಗೊಳಿಸುವುದು, ಸ್ವಚ್ಛಗೊಳಿಸುವುದು, ಹೈಡ್ರೋಫ್ರಾಕ್ಟರಿಂಗ್ ನೀರು ಸರಬರಾಜು ಪೈಪುಗಳ ದುರಸ್ತಿ ಅಥವಾ ಬದಲಾವಣೆ ಕಾಮಗಾರಿ ನಡೆಸಲು ಅಗತ್ಯ ಇರುವೆಡೆ ಹೊಸ ಕೊಳವೆ ಬಾವಿ ಕೊರೆಸಲು, ಪಂಪು ಮೋಟಾರ್ ಅಳವಡಿಸಲು ಮಾತ್ರ ಈ ಅನುದಾನ ಬಳಸಬೇಕೆಂದು ಆದೇಶದಲ್ಲಿ ಷರತ್ತು ವಿಧಿಸಲಾಗಿದೆ. ಈ ಅನುದಾನದ ಹಣವನ್ನು ಜಿಲ್ಲಾಧಿಕಾರಿಗಳು ತಮ್ಮ ಖಾತೆಯಲ್ಲಿ ಅನಾವಶ್ಯಕವಾಗಿ ಜಮಾಗೊಳಿಸದೆ ಖಜಾನೆಯಿಂದ ಡ್ರಾ ಮಾಡಿ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಯೋಜನೆಗೆ ಆದ್ಯತೆ ಮೇರೆಗೆ ಬಳಸತಕ್ಕದ್ದು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ರಾಜ್ಯ ಸರಕಾರ ಈ ಹಣ ಬಿಡುಗಡೆ ಮಾಡಿರುವುದು ಕುತೂಹಲ ಮೂಡಿಸಿದೆ. ಹಾಗೆಯೇ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗದಂತೆಯೂ ಸರಕಾರ ಎಚ್ಚರಿಕೆ ವಹಿಸಿದೆ.