ಬೆಂಗಳೂರು: ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಹಾನಿಗೊಳಗಾಗಿರುವ ಮೂಲ ಸೌಕರ್ಯ ಮರುಸ್ಥಾಪಿಸುವ ಕಾಮಗಾರಿಗೆ 500 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.
ದೇವನಹಳ್ಳಿಯಲ್ಲಿನ ಖಾಸಗಿ ರೆಸಾರ್ಟ್ನಲ್ಲಿ ಮಳೆ ಮತ್ತು ನೆರೆ ಹಾವಳಿ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಿಎಂ, ಮಳೆ ಹಾನಿಯಿಂದ ಮೂಲ ಸೌಕರ್ಯ ಹಾನಿ ಬಗ್ಗೆ ವರದಿ ಪಡೆದುಕೊಂಡರು. ತಕ್ಷಣವೇ ಮೂಲ ಸೌಕರ್ಯ ಮರುಸ್ಥಾಪಿಸುವ ಕಾಮಗಾರಿಗೆ 500 ಕೋಟಿ ರೂಪಾಯಿ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದರು.
ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರಿಂದ ಹಲವಾರು ಜಿಲ್ಲೆಗಳಲ್ಲಿ ಸಮಸ್ಯೆಯಾಗಿದೆ. ಮೂಲ ಸೌಕರ್ಯಗಳಾದ ರಸ್ತೆ, ಸೇತುವೆ, ಶಾಲೆ, ಅಂಗವಾಡಿ ವಿದ್ಯುತ್ ಕಂಬ, ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡಗಳು ಹಾನಿಗೆ ಒಳಗಾಗಿವೆ. ಈ ಹಾನಿಯನ್ನು ಜಿಲ್ಲಾಧಿಕಾರಿಗಳು ವರದಿ ಮಾಡಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ನಾನು ಕೆಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೆ. ಆ ಸಂದರ್ಭದಲ್ಲಿ ಈ ಹಾನಿಯನ್ನು ನಾನು ಸ್ವತಃ ವೀಕ್ಷಣೆ ಮಾಡಿದ್ದೇನೆ. ತ್ವರಿತ ಗತಿಯಲ್ಲಿ ಮೂಲ ಸೌಕರ್ಯಗಳನ್ನು ಯಥಾಸ್ಥಿತಿಗೆ ತರಬೇಕಾಗಿದೆ. ಇದಕ್ಕಾಗಿ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಬೇಕಾಗಿದೆ ಎಂದರು.
ಜಿಲ್ಲೆಗಳ ಮಾಹಿತಿ ಪಡೆದ ಸಿಎಂ: ಸಭೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಹಾಸನ, ಬೀದರ, ಬೆಳಗಾವಿ, ಕಲಬುರಗಿ, ಮೈಸೂರು, ಹಾವೇರಿ, ಧಾರವಾಡ, ದಾವಣಗೆರೆ, ಯಾದಗಿರಿ, ಬಾಗಲಕೋಟ, ವಿಜಯಪುರ, ರಾಯಚೂರು, ವಿಜಯನಗರ, ಚಾಮರಾಜನಗರ, ಮಂಡ್ಯ, ಬಳ್ಳಾರಿ ಜಿಲ್ಲೆಗಳ ಜಿಲ್ಲಾಧಿಕಾರಿ, ಸಿಇಒ, ಎಸ್ಪಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ ನಡೆಸಿ, ಆಯಾ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮತ್ತು ಹಾನಿಯ ಬಗ್ಗೆ ಮಾಹಿತಿ ಪಡೆದರು.
ಸಭೆಯಲ್ಲಿ ಕಂದಾಯ ಸಚಿವ ಆರ್ ಅಶೋಕ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ವಿಪತ್ತು ಪರಿಹಾರ ಘಟಕದ ಡಾ. ಮನೋಜ ಉಪಸ್ಥಿತರಿದ್ದರು.