ಬೆಂಗಳೂರು: ಕಾಂಗ್ರೆಸ್ ಪಕ್ಷ ತೊರೆದಿರುವ ಮಾಜಿ ಸಂಸದ ಮುದ್ದಹನುಮೇಗೌಡ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಲಿದ್ದಾರೆ. ಬಿಜೆಪಿ ನಾಯಕರ ಜೊತೆಗಿನ ಮಾತುಕತೆ ಫಲಪ್ರದವಾದ ಹಿನ್ನೆಲೆಯಲ್ಲಿ ಕೈ ತೊರೆದು ಕಮಲ ಮುಡಿಯುತ್ತಿದ್ದಾರೆ.
ಇಂದು ಬೆಳಗ್ಗೆ 9 ಗಂಟೆಗೆ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಮಾಧುಸ್ವಾಮಿ ಸಮ್ಮುಖದಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ನಾಯಕರು ಕುಣಿಗಲ್ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಇದನ್ನೂ ಓದಿ: ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಂಸದ ಮುದ್ದಹನುಮೇಗೌಡ ಗುಡ್ ಬೈ.. ಡಿಕೆಶಿಗೆ ರಾಜೀನಾಮೆ ಪತ್ರ ಸಲ್ಲಿಕೆ
ಮೊದಲು ಕಾಂಗ್ರೆಸ್‌ನಲ್ಲಿದ್ದ ಮುದ್ದಹನುಮೇಗೌಡ ನಂತರ ರಾಜಕೀಯ ಕಾರಣಗಳಿಂದಾಗಿ ಜೆಡಿಎಸ್ ಸೇರಿದ್ದರು. ಬದಲಾದ ಸನ್ನಿವೇಶದಲ್ಲಿ ಕಾಂಗ್ರೆಸ್‌ಗೆ ಮರಳಿದ್ದರು. ಕಳೆದ ಬಾರಿ ನಡೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರವನ್ನು ಮೈತ್ರಿ ಪಕ್ಷವಾದ ಜೆಡಿಎಸ್‌ಗೆ ಬಿಟ್ಟು ಕೊಟ್ಟಿದ್ದರಿಂದ ಮುದ್ದಹನುಮೇಗೌಡ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಜೊತೆಗೆ ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಕುಣಿಗಲ್ ಕ್ಷೇತ್ರಕ್ಕೆ ಟಿಕೆಟ್ ಬೇಡಿಕೆ ಇಟ್ಟಿದ್ದರು. ಇದಕ್ಕೆ ಕಾಂಗ್ರೆಸ್ ನಾಯಕರಿಂದ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಕೈ ತೊರೆದು ಬಿಜೆಪಿ ಸೇರುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಟಿಕೆಟ್ಗೆ ಸೋನಿಯಾ ಗಾಂಧಿ ಬಳಿ ಹೋಗುವೆ : ಮಾಜಿ ಸಂಸದ ಮುದ್ದಹನುಮೇಗೌಡ