ಬೆಂಗಳೂರು: ನಗರದ ಯಲಹಂಕ ಬಳಿಯ ಸರ್ಕಾರಿ ಜಮೀನನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೆಎಎಸ್ ಅಧಿಕಾರಿ ರಂಗನಾಥ್ ವಿರುದ್ಧ ಸಲ್ಲಿಸಿರುವ ದೂರಿನ ಸಂಬಂಧ ಕ್ರಮ ಜರುಗಿಸದೆ ಇರುವುದಕ್ಕೆ ವಿವರಣೆ ನೀಡುವಂತೆ ಸೂಚಿಸಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ನಗರದ ಸಾಮಾಜಿಕ ಕಾರ್ಯಕರ್ತ ಕೃಷ್ಣ ರಾಮಯ್ಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ ಅಕ್ರಮ ಎಸಗಿದ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದೇವೆ. ಆದರೆ ಈವರೆಗೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಎಸಿಬಿ ಯಾವ ಕಾರಣಕ್ಕಾಗಿ ಈವರೆಗೆ ಕ್ರಮ ಜರುಗಿಸಿಲ್ಲ ಎಂಬುದಕ್ಕೆ ವಿವರಣೆ ನೀಡುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ:
ಯಲಹಂಕ ಬಳಿಯ ಸರ್ಕಾರಿ ಭೂಮಿಯನ್ನು ಕಂದಾಯ ಇಲಾಖೆ ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ ಖಾಸಗಿ ವ್ಯಕ್ತಿಗಳಿಗೆ ವರ್ಗಾವಣೆ ಮಾಡಿದ್ದರು. ಇದಕ್ಕೆ ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಆಗಿದ್ದ ಕೆ.ರಂಗನಾಥ್ ಆದೇಶ ನೀಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಂಜುನಾಥ ಪ್ರಸಾದ್ ಎಸಿ ರಂಗನಾಥ್ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆ ವಶಪಡಿಸಿಕೊಂಡಿದ್ದರು. ಅಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಶಿಫಾರಸು ಮಾಡಿದ್ದರು. ಇದೇ ವಿಚಾರವಾಗಿ ಅರ್ಜಿದಾರರು ಎಸಿಬಿಯಲ್ಲಿ ದೂರು ದಾಖಲಿಸಿದ್ದರು. ಆದರೆ ಎಸಿಬಿ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ಅರ್ಜಿದಾರರು, ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.