ಬೆಂಗಳೂರು: ನಗರದಲ್ಲಿನ ರಾಜಕಾಲುವೆ ಒತ್ತುವರಿ ತೆರವುಗೊಳಿಸುವ ವಿಷಯದಲ್ಲಿ ಮೆಸರ್ಸ್ ಬಾಗ್ಮನೆ ಡೆವಲಪಮೆಂಟ್ ಪ್ರೈವೆಟ್ ಲಿಮಿಟೆಡ್ ಸಲ್ಲಿಸಿದ್ದ ದೂರಿನ ಅನ್ವಯ ಲೋಕಾಯುಕ್ತ ಪ್ರಾರಂಭಿಸಿರುವ ಪ್ರಕ್ರಿಯೆಗಳ ಕಾನೂನು ಬದ್ಧತೆ ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದೆ.
ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್ಆರ್ ಹಿರೇಮಠ ಅರ್ಜಿ ಸಲ್ಲಿಸಿದ್ದಾರೆ. ಕರ್ನಾಟಕ ಲೋಕಾಯುಕ್ತ, ಬಿಬಿಎಂಪಿ, ಪೌರಾಡಳಿತ ಇಲಾಖೆ, ಬಾಗ್ಮನೆ ಡೆವಲಪ್ಮೆಂಟ್ ಪ್ರೈವೇಟ್ ಲಿಮಿಟೆಡ್ನ್ನು ಪ್ರತಿವಾದಿಗಳನ್ನಾಗಿಸಲಾಗಿದ್ದು, ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ.
ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳಲ್ಲಿ ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ವಸತಿ ಸಮುಚ್ಚಯಗಳು ಸೇರಿದಂತೆ ವಿವಿಧ ಕಟ್ಟಡಗಳು ರಾಜಕಾಲುವೆ ಒತ್ತುವರಿ ಮಾಡಿರುವ ಪರಿಣಾಮ ಮಳೆ ನೀರು ಸರಾಗವಾಗಿ ಹರಿಯಲಾರದೇ ಕೆಲ ಭಾಗಗಳಲ್ಲಿ ಮನೆಗಳಿಗೆ ನೀರು ನುಗ್ಗುವುದಕ್ಕೆ ಕಾರಣವಾಗಿತ್ತು. ಈ ಗೊಂದಲಗಳಿಗೆ ಪರಿಹಾರ ಕಲ್ಪಿಸುವ ಸಲುವಾಗಿ ಬಿಬಿಎಂಪಿ ತಕ್ಷಣ ಕ್ರಮಕ್ಕೆ ಮುಂದಾಗಿದ್ದು ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿತ್ತು.
ಈ ನಡುವೆ ಮೆಸ್ ಬಾಗ್ಮನೆ ಡೆವಲಪಮೆಂಟ್ ಪ್ರೈವೇಟ್ ಲಿಮಿಟೆಡ್ ನಿಂದ ಸೆ.11ರಂದು ಲೋಕಾಯುಕ್ತರಿಗೆ ದೂರು ಸಲ್ಲಿಸಲಾಗಿದೆ. ಬಾಗ್ಮನೆ ಟೆಕ್ ಪಾರ್ಕ್ನ ಕಾಂಪೌಂಡ್ ಮತ್ತು ಚರಂಡಿ ಮೇಲಿನ ಕಲ್ಲುಗಳನ್ನು ಪಾಲಿಕೆ ಅಧಿಕಾರಿಗಳು ತೆಗೆಯುವ ಬಗ್ಗೆ ಆತಂಕವಿದೆ ಎಂದು ಮನವಿ ಮಾಡಿದ್ದರು.
ಈ ಸಂಬಂಧ ವಿಚಾರಣೆ ನಡೆಸಿದ್ದ ಲೋಕಾಯುಕ್ತರು, ಬಾಗ್ಮನೆ ಟೆಕ್ ಪಾರ್ಕ್ನ ಒತ್ತುವರಿ ತೆರವು ಮಾಡಿದಲ್ಲಿ ಈ ಭಾಗದಲ್ಲಿನ ನೆರೆಹೊರೆಯರ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆಗಳಿವೆ ಎಂದು ಸೂಚನೆ ನೀಡಿದ್ದರು. ಈ ರೀತಿ ಸೂಚನೆ ನೀಡಲು ಲೋಕಾಯುಕ್ತರಿಗೆ ಕಾನೂನಿನಲ್ಲಿ ಅವಕಾಶವಿಲ್ಲ. ಆದ್ದರಿಂದ ಬಾಗ್ಮನೆ ಒತ್ತುವರಿಗೆ ಸಂಬಂಧಿಸಿದಂತೆ ಲೋಕಾಯುಕ್ತರು ನೀಡಿರುವ ದೂರಿನ ಸಂಬಂಧ ಪ್ರಕ್ರಿಯೆ ರದ್ದು ಮಾಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.
ಅಲ್ಲದೆ, ಕರ್ನಾಟಕ ಲೋಕಾಯುಕ್ತ ರಾಜ್ಯದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಶ್ರಮಿಸಬೇಕಾಗಿದೆ. ಆದರೆ, ಬಾಗ್ಮನೆ ಒತ್ತುವರಿ ಸಂಬಂಧ ಮಧ್ಯಪ್ರವೇಶಿಸುವ ಮೂಲಕ ಹೈಕೋರ್ಟ್ನ ನ್ಯಾಯಾಂಗ ಅಧಿಕಾರವನ್ನು ಪ್ರಶ್ನೆ ಮಾಡುವಂತಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಬಾಗ್ಮನೆ ಟೆಕ್ ಪಾರ್ಕ್ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್