ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ ಜಾಲದಲ್ಲಿ ಭಾಗಿಯಾಗಿರುವ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ಹಾಗೂ ಸಂಜನಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಜಾಮೀನು ಕೋರಿ ಸಂಜನಾ ಹಾಗೂ ರಾಗಿಣಿ ಸಲ್ಲಿಸಿರುವ ಅರ್ಜಿಯನ್ನು ಇಂದು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲರು ಹಾಗೂ ಸರ್ಕಾರದ ಪರ ವಕೀಲರ ಸುದೀರ್ಘ ವಾದ - ಪ್ರತಿವಾದ ಆಲಿಸಿದ ಪೀಠ, ತೀರ್ಪು ಕಾಯ್ದಿರಿಸಿತು.
ಇದಕ್ಕೂ ಮುನ್ನ ಸಂಜನಾ ಪರ ವಾದಿಸಿದ ಹಿರಿಯ ವಕೀಲ ಹಸ್ಮತ್ ಪಾಷಾ, ಸಂಜನಾ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲದಿದ್ದರೂ ಪ್ರಕರಣ ದಾಖಲಿಸಲಾಗಿದೆ. ಎನ್ ಡಿ ಪಿ ಎಸ್ ಕಾಯ್ದೆಯ ನಿಯಮಗಳನ್ನು ಸಿಸಿಬಿ ಪೊಲೀಸರು ಸರಿಯಾಗಿ ಪಾಲನೆ ಮಾಡಿಲ್ಲ. ಅವರ ಮನೆ ಪರಿಶೀಲಿಸಿದಾಗ ಯಾವುದೇ ಮಾದಕವಸ್ತು ಲಭ್ಯವಾಗಿಲ್ಲ. ಪ್ರಕರಣದಲ್ಲಿ ಸಂಜನಾ ಮುಗ್ದೆ. ಹೀಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.
ರಾಗಿಣಿ ಪರ ಹಿರಿಯ ವಕೀಲ ಜಯಕುಮಾರ್ ಎಸ್ ಪಾಟೀಲ್ ಅವರು ವಾದಿಸಿ, ಡ್ರಗ್ಸ್ ಜಾಲ ಪ್ರಕರಣದಲ್ಲಿ ರಾಗಿಣಿ ಅಮಾಯಕಿ. ಇವರ ವಿರುದ್ಧ ಸಿಸಿಬಿ ಪೊಲೀಸರಿಗೆ ಯಾವುದೇ ಸಾಕ್ಷ್ಯ ಲಭ್ಯವಿಲ್ಲ. ತನಿಖೆಗೆ ಸಹಕಾರ ನೀಡಿದ್ದಾರೆ. ಒಂದೂವರೆ ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದ್ದರಿಂದ ಜಾಮೀನು ನೀಡಬೇಕೆಂದು ವಿನಂತಿಸಿದರು.
ಅರ್ಜಿದಾರರ ಪರ ವಕೀಲರ ಕೋರಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಸಿಸಿಬಿ ಪರ ಎಸ್ ಪಿಪಿ ವೀರಣ್ಣ ತಿಗಡಿ ವಾದ ಮಂಡಿಸಿ, ಎಲ್ಲ ಆರೋಪಿಗಳೂ ಸಾಕಷ್ಟು ಪ್ರಭಾವಿಗಳಾಗಿದ್ದಾರೆ. ಜಾಮೀನು ನೀಡಿದರೆ ಸಾಕ್ಷ್ಯ ನಾಶ ಮಾಡುತ್ತಾರೆ. ಕೆಲ ಆರೋಪಿಗಳಂತೂ ಪೊಲೀಸರ ಮೇಲೆಯೇ ಪ್ರಭಾವ ಬಳಸಿದ್ದಾರೆ. ಈಗಾಗಲೇ ಸಿಸಿಬಿ ಎಸಿಪಿ ಹಂತದ ಅಧಿಕಾರಿಯೊಬ್ಬರನ್ನು ಮಾಹಿತಿ ಸೋರಿಕೆ ಮಾಡಿದ ಆರೋಪದಡಿ ಅಮಾನತು ಮಾಡಲಾಗಿದೆ. ಪ್ರಕರಣದ ಕೆಲ ಪ್ರಮುಖ ಆರೋಪಿಗಳು ಈಗಲೂ ತಲೆಮರೆಸಿಕೊಂಡಿದ್ದಾರೆ. ಅವರನ್ನು ಬಂಧಿಸಿದ ನಂತರ ಇನ್ನಷ್ಟು ಮಾಹಿತಿ ದೊರೆಯಲಿದೆ. ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲವಾದ್ದರಿಂದ, ಈ ಹಂತದಲ್ಲಿ ಜಾಮೀನು ನೀಡಿದರೆ ತನಿಖೆಗೆ ಅಡ್ಡಿಯಾಗಲಿದೆ. ಆದ್ದರಿಂದ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಮನವಿ ಮಾಡಿದರು.