ಬೆಂಗಳೂರು: ನ್ಯಾ. ನಾಗಮೋಹನ್ ದಾಸ್ ವರದಿ ಜಾರಿ ಬಗ್ಗೆ ಸರ್ವಪಕ್ಷ ಸಭೆ ಕರೆದಿದ್ದೆವು. ಎಸ್ಸಿ ಮತ್ತು ಎಸ್ಟಿ ಮೀಸಲಾತಿ ಹೆಚ್ಚಳ ಸಂಬಂಧ ಸರ್ಕಾರ ಒಪ್ಪಿಕೊಂಡಿದ್ದು, ಮುಂದಿನ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ ಮಾಡಿ ಜಾರಿ ಮಾಡುತ್ತೇವೆ ಎಂದು ಸರ್ವಪಕ್ಷ ಸಭೆ ಬಳಿಕ ಕಾನೂನು ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ.
ಆ ಸಮುದಾಯಗಳಿಗೂ ಶೈಕ್ಷಣಿಕ ಉದ್ದೇಶಕ್ಕೆ ಹೆಚ್ಚು ಹಣ ಮೀಸಲಿಡುವಂತೆ ಹೇಳಿದ್ದಾರೆ. ಅದನ್ನು ಸರ್ಕಾರ ಒಪ್ಪಿದೆ. ಮೀಸಲಾತಿ ಶೇಕಡಾ 50 ಮೀರಬಾರದು ಎಂದು ಸುಪ್ರೀಂಕೋರ್ಟ್ ತೀರ್ಪು ಇದೆ. ಆದರೆ ತಮಿಳುನಾಡಿನಲ್ಲಿ ಇದಕ್ಕೆ ಅವಕಾಶ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ತಿದ್ದುಪಡಿ ಮಾಡಬೇಕಾಗುತ್ತದೆ. ಇತರ ಸಮುದಾಯಗಳ ಮೀಸಲಾತಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಮಾಹಿತಿ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಎಸ್ಸಿ ಮತ್ತು ಎಸ್ಟಿ ಮೀಸಲಾತಿ ಹೆಚ್ಚಳ ಕುರಿತಂತೆ ಸರ್ವಪಕ್ಷ ಸಭೆ ನಡೆಯಿತು.
ಯಾವ ಯಾವ ನಾಯಕರು ಸಭೆಯಲ್ಲಿ ಭಾಗಿ: ಸಭೆಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ, ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ, ಜೆ.ಸಿ. ಮಾಧುಸ್ವಾಮಿ, ಬಿ.ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಆನಂದಸಿಂಗ್, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು.ಟಿ. ಖಾದರ್, ವಿಧಾನಸಭೆ ಪ್ರತಿಪಕ್ಷದ ಮುಖ್ಯಸಚೇತಕ ವಿಧಾನ ಪರಿಷತ್ ಪ್ರತಿಪಕ್ಷದ ಮುಖ್ಯಸಚೇತಕ ಪ್ರಕಾಶ್ ರಾಠೋಡ್, ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ವಿಧಾನಪರಿಷತ್ ಸದಸ್ಯ ಭೋಜೆಗೌಡ, ರಾಜ್ಯ ಸರ್ಕಾರದ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಮೀಸಲಾತಿ ಹೆಚ್ಚಳ ಕುರಿತು ಸಿಎಂ ಹಾಗೂ ಇತರ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಸಭೆಗೂ ಮುನ್ನ ಮಾತನಾಡಿದ ಕಾಂಗ್ರೆಸ್ ಉಪ ನಾಯಕ ಯು.ಟಿ.ಖಾದರ್ ಅವರು, ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಿಸಲು ಬಿಜೆಪಿ ಸರ್ಕಾರಕ್ಕೆ ಮನಸ್ಸಿಲ್ಲ. ನಿವೃತ್ತ ನ್ಯಾ.ನಾಗಮೋಹನ್ ದಾಸ್ ಕಮಿಟಿ ರಚನೆಯಾಗಿದ್ದು, ನಮ್ಮ ಸರ್ಕಾರದಲ್ಲಿ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ನಾಗಮೋಹನ್ ದಾಸ್ ಕಮಿಟಿ ರಚನೆಯಾಯಿತು. ಆದರೆ, ಇದುವರೆಗೂ ಮೀಸಲಾತಿ ಹೆಚ್ಚಳ ಮಾಡಲು ಬಿಜೆಪಿ ಸರ್ಕಾರ ಮನಸ್ಸು ಮಾಡಲಿಲ್ಲ ಎಂದು ಹೇಳಿದರು.
(ಓದಿ: ಕೋರ್ ಕಮಿಟಿ ಸಭೆ: ಎಸ್ಟಿ ಮೀಸಲಾತಿ ಹೆಚ್ಚಿಸುವಂತೆ ಸಿಎಂಗೆ ಮನವಿ)