ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಔಷಧಗಳು ಕೊರತೆಯಾಗದಂತೆ ಎಲ್ಲ ಅಗತ್ಯ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಹೈಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಕೋವಿಡ್ ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.
ವಿಚಾರಣೆ ವೇಳೆ ವಕೀಲ ಪಿ. ರವೀಂದ್ರ ಎಂಬುವರು ಹೈಕೋರ್ಟ್ ಗೆ ಬರೆದ ಪತ್ರದ ಸಾರಾಂಶ ಪ್ರಸ್ತಾಪಿಸಿದ ಪೀಠ, ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿತರ ಚಿಕಿತ್ಸೆಗೆ ಬಳಸುವ ಲೈಪೊಸೋಮಲ್ ಆ್ಯಂಫೋಟೆರಿಸಿನ್ ಬಿ' ಚುಚ್ಚುಮದ್ದು ಕೊರತೆಯಾಗಿದೆ ಎಂದಿದ್ದಾರೆ. ಹಾಗಿದ್ದರೆ ವಾಸ್ತವ ಸ್ಥಿತಿಗಳೇನು, ರಾಜ್ಯದಲ್ಲಿ ಚುಚ್ಚುಮದ್ದು ಕೊರತೆ ಇದೆಯೇ ಎಂದು ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿತು.
ಇದಕ್ಕೆ ರಾಜ್ಯ ಸರ್ಕಾರದ ಪರ ವಕೀಲರು ಉತ್ತರಿಸಿ, ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಏರಿಕೆಯಾಗಿವೆ. ಚಿಕಿತ್ಸೆಗೆ ಬಳಸುವ ಔಷಧ ಭಾರತದಲ್ಲಿ ತಯಾರಾಗುತ್ತಿಲ್ಲ. ಅದನ್ನು ಹೊರ ದೇಶಗಳಿಂದ ಆಮದು ಮಾಡಿಕೊಳ್ಳಬೇಕಿದೆ. ಔಷಧ ಲಭ್ಯವಾಗುವಂತೆ ನೋಡಿಕೊಳ್ಳಲು ಎಲ್ಲಾ ರೀತಿಯ ಪ್ರಯತ್ನ ನಡೆದಿದೆ ಎಂದು ವಿವರಿಸಿದರು.
ಹೇಳಿಕೆ ಪರಿಗಣಿಸಿದ ಪೀಠ, ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಬಳಸುವ ಔಷಧ ಕೊರತೆಯಾಗದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು. ಸೋಂಕು ನಿಯಂತ್ರಣಕ್ಕೆ ಸಂಬಂಧಿದಂತೆ ಅಗತ್ಯ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಕೇಂದ್ರವೂ ಅಗತ್ಯ ನೆರವು ನೀಡಬೇಕು. ಹಾಗೆಯೇ, ಔಷಧ ಹಂಚಿಕೆ ಕುರಿತು ಮಾಹಿತಿ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸೂಚಿಸಿ, ವಿಚಾರಣೆ ಮುಂದೂಡಿತು.
ಓದಿ: ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ: ರಾಜ್ಯದಲ್ಲಿ ಮೂರು ದಿನ ಭಾರಿ ಮಳೆ ಸಾಧ್ಯತೆ