ಬೆಂಗಳೂರು: ಡಿಸೆಂಬರ್ ಅಂತ್ಯದವರೆಗೆ ಶಾಲೆಗಳನ್ನು ಪುನಾರಂಭಿಸುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಶಾಲೆಗಳ ಆರಂಭದ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು, ಡಿಸೆಂಬರ್ ಮೂರನೇ ವಾರ ಮತ್ತೊಂದು ಸಭೆ ನಡೆಸಲಾಗುತ್ತದೆ. ಈ ಬಗ್ಗೆ ಮತ್ತೊಮ್ಮೆ ತಜ್ಞರ ಜೊತೆ ಸಮಾಲೋಚನೆ ನಡೆಸುತ್ತೇವೆ ಎಂದು ತಿಳಿಸಿದರು.
ತಜ್ಞರ ಜೊತೆಗೆ ಸಭೆ ನಡೆಸಿದ ಬಳಿಕ ಶಾಲೆ ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ಸದ್ಯಕ್ಕೆ ಶಾಲೆ ಆರಂಭಿಸದಿರುವ ಬಗ್ಗೆ ನಿರ್ಧರಿಸಿದ್ದೇವೆ ಎಂದರು.
ಸಭೆಯಲ್ಲಿ 8 ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಸುಮಾರು ಅರ್ಧ ತಾಸಿಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಪಡೆದ ಸಿಎಂ ಡಿಸೆಂಬರ್ ಅಂತ್ಯದ ವರೆಗೆ ಶಾಲೆ ಆರಂಭಿಸದಿರುವ ಬಗ್ಗೆ ನಿರ್ಧಾರ ಕೈಗೊಂಡರು.