ಬೆಂಗಳೂರು: ವಿಧಾನಸೌಧದಲ್ಲಿ ಅಧಿವೇಶನ ನಡೆಯುತ್ತಿರುವ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ವಿಧಾನಸೌಧದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಕೆಲ ಸಂಘಟನೆಗಳು ಅಧಿವೇಶನದ ಸಮಯದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಮತ್ತು ಪೊಲೀಸ್ ಮೂಲಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವಿಧಾನಸೌಧದ ಸುತ್ತಮುತ್ತಲಿನ 2 ಕಿ.ಮೀ ವರೆಗೂ 20ನೇ ತಾರೀಖು ರಾತ್ರಿ 12 ಗಂಟೆ ವರೆಗೂ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.
ಇದರ ಜೊತೆಗೆ ನಗರ ಪೊಲೀಸರು ವಿಧಾನಸೌಧ ಸುತ್ತಮುತ್ತ ಎಂದಿನಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ. ಸಿಬ್ಬಂದಿ, ರಾಜಕೀಯ ನಾಯಕರು, ವಿಧಾನಸೌಧಕ್ಕೆ ಸಂಬಂಧಪಡದ ವ್ಯಕ್ತಿಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿರಿಸಿದ್ದಾರೆ. ಇದರ ಮಧ್ಯೆಯೂ ಹಲವು ಸಂಘಟನೆಗಳು ಅಧಿವೇಶನಕ್ಕೆ ಮುತ್ತಿಗೆ ಹಾಕುವ ಸಾಧ್ಯತೆಯಿದೆ.