ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಈ ಕುರಿತು ರಾಜ್ಯಸಭಾ ಸದಸ್ಯ ರಾಜೀವ್ ಗೌಡ, ಶಾಸಕಿ ಸೌಮ್ಯರೆಡ್ಡಿ ಸೇರಿ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ನಡೆಸಿತು. ಹಿರಿಯ ನ್ಯಾಯವಾದಿ, ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮಕುಮಾರ್ ಅವರು ವಾದಿಸಿ ಅರ್ಜಿ ವಿಚಾರಣೆಗೆ ಅಂಗೀಕರಿಸುವಂತೆ ಪೀಠಕ್ಕೆ ಮನವಿ ಮಾಡಿದರು. ಆದರೆ ನ್ಯಾಯಪೀಠವು ಅರ್ಜಿಯನ್ನು ಶುಕ್ರವಾರ ಪರಿಗಣಿಸುವುದಾಗಿ ಹೇಳಿತು.
ಪೌರತ್ವ ಕಾಯ್ದೆಯನ್ನು ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಸಂವಿಧಾನದ ಅನುಚ್ಛೇದ 19(1), ಅನುಚ್ಛೇದ 14 ಮತ್ತು 21ರ ಅಡಿಯಲ್ಲಿ ಅವಕಾಶವಿದೆ. ಆದರೆ ಪ್ರತಿಭಟನೆ ನಡೆಸಲು ವಿರೋಧ ವ್ಯಕ್ತಪಡಿಸಿ ಸೆಕ್ಷನ್ 144 ಜಾರಿಗೊಳಿಸಿರುವುದನ್ನು ರದ್ದುಪಡಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.