ಬೆಂಗಳೂರು : ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಸದುದ್ದೇಶದಿಂದ ನಗರದ ಹೃದಯಭಾಗವಾಗಿರುವ ಆನಂದರಾವ್ ಸರ್ಕಲ್ ಬಳಿ 1,250 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಸುಸಜ್ಜಿತ 50 ಮಹಡಿಗಳ ಅವಳಿ ಗೋಪುರವನ್ನು, ಎರಡು ವರ್ಷದಲ್ಲಿ ಪೂರ್ಣಗೊಳಿಸುವುದಾಗಿ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ತಿಳಿಸಿದರು.
ಕಾಮಗಾರಿ ಉದ್ದೇಶಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಹಲವು ಸರ್ಕಾರಿ ಕಚೇರಿಗಳು ಬಾಡಿಗೆ ಕಟ್ಟಡಗಳಲ್ಲಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತಿರುವುದಲ್ಲದೇ, ಸಕಾಲದಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಕಷ್ಟವಾಗುತ್ತಿದೆ. ಸಾರ್ವಜನಿಕರಿಗೂ ಅನಾನುಕೂಲವಾಗುತ್ತಿದೆ. ಇದನ್ನು ಮನಗಂಡು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, 2020 - 21 ನೇ ಸಾಲಿನ ಆಯವ್ಯಯದಲ್ಲಿ ಪ್ರತ್ಯೇಕ ಕಟ್ಟಡ ನಿರ್ಮಾಣದ ಬಗ್ಗೆ ಘೋಷಿಸಿದ್ದರು. ಕಳೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಕಟ್ಟಡ ನಿರ್ಮಾಣವಾಗಲಿರುವ ಪ್ರದೇಶವು ವಿಧಾನಸೌಧ, ವಿಕಾಸಸೌಧ, ಮೆಜೆಸ್ಟಿಕ್, ರೈಲ್ವೆ ನಿಲ್ದಾಣ, ಮೆಟ್ರೋ ನಿಲ್ದಾಣಕ್ಕೆ ಸಮೀಪದಲ್ಲಿರುವುದರಿಂದ ನೌಕರರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.
ಇದನ್ನೂ ಓದಿ : ಹೊಸ ವರ್ಷಾಚರಣೆ ಬದಲು ಈ ವರ್ಷ ಶೋಕಾಚರಣೆಯಾಗಿ ಆಚರಿಸಬೇಕು: ಸಚಿವ ಡಾ.ಕೆ.ಸುಧಾಕರ್
ಈ ಕಾಮಗಾರಿಯನ್ನು ಪಿಪಿಪಿ ಮಾದರಿಯಲ್ಲಿ ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮ ಲಿಮಿಟೆಡ್ (ಎನ್‍ಬಿಸಿಸಿ) ಇವರ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗುವುದು. 8.5 ಎಕರೆ ಸರ್ಕಾರಿ ನಿವೇಶನದಲ್ಲಿ, 23.94 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಈ ಬೃಹತ್ ಕಟ್ಟಡಗಳನ್ನು ನಿರ್ಮಿಸಲಾಗುವುದು. ಶೇ. 60:40 ಅನುಪಾತದಲ್ಲಿ ಭಾಗಶಃ ಕಟ್ಟಡಗಳನ್ನು ನಿರ್ಮಿಸಲಾಗುವುದು. ಎನ್‍ಬಿಸಿಸಿಗೆ 30 ವರ್ಷಗಳ ಲೀಸ್ ನೀಡಲಾಗುತ್ತದೆ. ಈ ಕುರಿತು ಶೀಘ್ರದಲ್ಲೇ ಒಡಂಬಡಿಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಎನ್‍ಬಿಸಿಸಿ ಸಹಭಾಗಿತ್ವದಲ್ಲಿ ಕಟ್ಟಡ ನಿರ್ಮಾಣವಾಗುತ್ತಿರುವುದರಿಂದ, ಶೇ. 60 ರಷ್ಟು ಕಟ್ಟಡ ಪ್ರದೇಶ ರಾಜ್ಯ ಸರ್ಕಾರಕ್ಕೆ ಸಿಗಲಿದೆ. ಇನ್ನುಳಿದವು ಇತರ ಉದ್ಧೇಶಗಳಿಗಾಗಿ ಬಳಸಲಾಗುತ್ತದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ವೆಚ್ಚವಿಲ್ಲದೇ ಕಟ್ಟಡ ನಿರ್ಮಾಣವಾಗುತ್ತದೆ ಮತ್ತು ಕಟ್ಟಡ ನಿರ್ವಹಣೆಯ ವೆಚ್ಚವನ್ನು ಕಟ್ಟಡ ವಾಸಿಗಳಿಂದಲೇ ಭರಿಸಲು ಉದ್ದೇಶಿಸಿರುವುದರಿಂದ ನಿರ್ವಹಣೆಯ ವೆಚ್ಚವೂ ಉಳಿಕೆಯಾಗಲಿದೆ. ಒಟ್ಟಾರೆ ಯೋಜನೆಯಿಂದ ಯಾವುದೇ ವೆಚ್ಚವಿಲ್ಲದೇ ಸರ್ಕಾರಕ್ಕೆ 263 ಕೋಟಿ ರೂ. ನಿವ್ವಳ ಲಾಭವಾಗಲಿದೆ. ಈ ಕಾಮಗಾರಿಯನ್ನು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಹೊಸ ಕಟ್ಟಡ ನಿರ್ಮಾಣವಾಗಲಿರುವ ನಿವೇಶನದಲ್ಲಿ 1,940 ಕ್ಕಿಂತಲೂ ಹಿಂದೆ ನಿರ್ಮಿಸಲಾದ ಲೋಕೋಪಯೋಗಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಕಟ್ಟಡಗಳಿದ್ದು, ಇವುಗಳನ್ನು ಶೀಘ್ರದಲ್ಲೇ ತೆರವುಗೊಳಿಸಲಾಗುವುದು ಎಂದು ಡಿಸಿಎಂ ಹೇಳಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯ ಅಭಿಯಂತರರಾದ ಶಿವಯೋಗಿ ಹಿರೇಮಠ, ಅಧೀಕ್ಷಕ ಅಭಿಯಂತರ ಎಲ್. ಶ್ರೀಧರ ಮೂರ್ತಿ, ಕಾರ್ಯನಿರ್ವಾಹಕ ಅಭಿಯಂತರ ಜಿ. ಡಿ. ಕುಮಾರ್ ಸೇರಿ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.