ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಪಡೆದುಕೊಳ್ಳುವ ಸಲುವಾಗಿ ಉಪ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳಾದ ಎಂಟಿಬಿ ನಾಗರಾಜ್ ಹಾಗೂ ಹೆಚ್.ವಿಶ್ವನಾಥ್ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ.
ಕುಮಾರಕೃಪಾ ಅತಿಥಿ ಗೃಹದಲ್ಲಿ ಬಿಜೆಪಿ ನಾಯಕರ ಜೊತೆ ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್ ಸಭೆ ನಡೆಸಿದ್ರು. ಟಿಕೆಟ್ ನೀಡಲು ಹೈಕಮಾಂಡ್ಗೆ ಒತ್ತಡ ಹೇರುವ ಕುರಿತು ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಕೋರ್ ಕಮಿಟಿ ಸಭೆಯಲ್ಲಿಯೂ ನಮ್ಮ ಹೆಸರುಗಳ ಕುರಿತು ಗಂಭೀರ ಚರ್ಚೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.
ಕುಮಾರಕೃಪಾದಲ್ಲಿನ ಸಭೆ ನಂತರ ವಿಧಾನ ಪರಿಷತ್ ಚುನಾವಣೆ ಹಾಗೂ ನಾಮ ನಿರ್ದೇಶನ ವಿಚಾರ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಮಹತ್ವದ ಸಭೆ ನಡೆಸಲಾಯಿತು. ಸಚಿವರಾದ ಅಶೋಕ್, ಎಸ್.ಟಿ.ಸೋಮಶೇಖರ್, ಶಾಸಕ ಎಂ.ಕೃಷ್ಣಪ್ಪ, ಮುನಿರತ್ನ, ರೋಷನ್ ಬೇಗ್, ಆರ್.ಶಂಕರ್ ಸಭೆಯಲ್ಲಿ ಭಾಗಿಯಾಗಿದ್ದರು.
ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಸುಧಾಕರ್, ಎಸ್.ಟಿ.ಸೋಮಶೇಖರ್, ಆರ್.ಅಶೋಕ್‌ರಿಂದ ಮುಖ್ಯಮಂತ್ರಿ ಮೇಲೆ ಒತ್ತಡ ಹೇರಲಾಯಿತು. ಸರ್ಕಾರ ರಚನೆಗಾಗಿ ರಾಜೀನಾಮೆ ನೀಡಿದ ಮಾಜಿ ಶಾಸಕರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಿ ಮಂತ್ರಿಗಳನ್ನಾಗಿ ಮಾಡಬೇಕು. ಆರ್.ಶಂಕರ್, ಎಂಟಿಬಿ ನಾಗರಾಜ್, ಹೆಚ್.ವಿಶ್ವನಾಥ್ ಅವರಿಗೆ ಪರಿಷತ್ ಟಿಕೆಟ್ ಕೊಡಬೇಕು. ಅಲ್ಲದೆ ರೋಷನ್ ಬೇಗ್ ಅವರಿಗೂ ಪರಿಷತ್ ಟಿಕೆಟ್ ನೀಡುವಂತೆ ಸಿಎಂಗೆ ಒತ್ತಾಯಿಸಿದರು ಎನ್ನಲಾಗಿದೆ.
ಈ ಸಭೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಿಎಂ ಜೊತೆ ಮಹತ್ವದ ಮಾತುಕತೆ ನಡೆಸಿದರು. ಕೋರ್ ಕಮಿಟಿ ಸಭೆಗೂ ಮೊದಲು ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಸಮಾಲೋಚನೆ ನಡೆಸಲಾಯಿತು.