ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಪ್ರಮುಖ 9 ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಸಕಾಲ ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿಂದು ಈ ಸೇವೆಗಳನ್ನು ಸಕಾಲ ಯೋಜನೆಗೆ ಒಳಪಡಿಸಲು ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಸುಲಲಿತ ಹಾಗೂ ಶೀಘ್ರವಾಗಿ ತಲುಪಿಸಬಹುದಾಗಿದೆ. ಈ ಸದುದ್ದೇಶದಿಂದ ಅಂತರ್ಜಾತಿ ವಿವಾಹಿತ ದಂಪತಿಗಳಿಗೆ ಪ್ರೋತ್ಸಾಹ ಧನ, ದೌರ್ಜನ್ಯ ಸಂತ್ರಸ್ತರಿಗೆ ಪರಿಹಾರ, ಯುಪಿಎಸ್‍ಸಿ, ಕೆಎಎಸ್ ಸೇರಿದಂತೆ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿ, ಪ್ರಬುದ್ಧ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಯೋಜನೆಗಳನ್ನು ಸಕಾಲ ವ್ಯಾಪ್ತಿಗೊಳಪಡಿಸಲಾಗಿದೆ. ಫಲಾನುಭವಿಗಳು ಈ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಆಯುಕ್ತ ರವಿಕುಮಾರ್ ಸುರಪುರ್, ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯ ಸಲಹೆಗಾರರಾದ ಇ.ವೆಂಕಟಯ್ಯ, ಡಿಸಿಎಂ ಅವರ ಆಪ್ತ ಕಾರ್ಯದರ್ಶಿ ವಿ.ಶ್ರೀನಿವಾಸ, ಅಪರ ನಿರ್ದೇಶಕ ನಾಗೇಶ್, ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮುಖ್ಯಸ್ಥ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.