ಬೆಂಗಳೂರು: ಮಾ.2ರಿಂದ 31ರವರೆಗೂ ನಡೆಯುವ ವಿಧಾನಸಭಾ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.
ಜಂಟಿ ಅಧಿವೇಶನ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳ ಕಾರ್ಯಕರ್ತರು ಪ್ರತಿಭಟನೆ, ಧರಣಿ, ವಿಧಾನಸೌಧ ಮುತ್ತಿಗೆ, ಸತ್ಯಾಗ್ರಹ, ಮೆರವಣಿಗೆ ನಡೆಯುವ ಸಾಧ್ಯತೆಯಿದ್ದು, ಈ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವ ಸಂಭವವಿದೆ.. ಹೀಗಾಗಿ ಮಾ.2ರ ಬೆಳಗ್ಗೆ 6 ಗಂಟೆಯಿಂದ ವಿಧಾನಸೌಧದ 2 ಕಿ.ಮೀ ಸುತ್ತಮುತ್ತಲು ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ತಿಳಿಸಿದ್ದಾರೆ.
ಈ ವೇಳೆ 5ಕ್ಕಿಂತ ಜನ ಸೇರುವುದು, ಮೆರವಣಿಗೆ ಅಥವಾ ಸಭೆ ನಡೆಸುವುದು ಹಾಗೂ ಪಟಾಕಿ ಸಿಡಿಸುವುದು ಕಾನೂನುಬಾಹಿರವಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸುವುದು ಕಂಡುಬಂದರೆ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.