ಬೆಂಗಳೂರು: ಬೀದರ್ನ ಶಾಹಿನ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಟಕ ಪ್ರದರ್ಶನ ಮಾಡಿದ್ದಕ್ಕೆ ದೇಶದ್ರೋಹ ಆರೋಪ ದಾಖಲಾಗಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಐವರು ಪೊಲೀಸರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಪ್ರಕರಣ ಸಂಬಂಧ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಐವರು ಪೊಲೀಸರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಅವರಿಂದ ಉತ್ತರ ಬಂದ ನಂತರ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು. ತನಿಖೆಗೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.
ವಾದ ಪರಿಗಣಿಸಿದ ನ್ಯಾಯಪೀಠ, ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿತು. ವಕೀಲೆ ನಯನ ಜ್ಯೋತಿ ಝಾವರ್ ಹಾಗೂ ಮಾನವ ಹಕ್ಕುಗಳ ಸಂಘಟನೆ ‘ಸಿಕ್ರಮ್’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.