ಬೆಂಗಳೂರು: ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 3.50 ಮಿ.ಮೀ. ಮಳೆಯಾಗಿದ್ದು, ಗ್ರಾಮಾಂತರ ಜಿಲ್ಲೆಯಲ್ಲಿ 4.67 ಮಿ.ಮೀ. ಮಳೆಯಾಗಿದೆ. ನಾಳೆಯೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಗರದಲ್ಲಿಂದು ಇಡೀ ದಿನ ತುಂತುರು ಮಳೆಯಾಗಿದೆ. ಸಂಜೆ ವೇಳೆಗೆ ಮಳೆ ಪ್ರಮಾಣ ಹೆಚ್ಚಾಗಿದೆ. ನಗರದ ಮೆಜೆಸ್ಟಿಕ್, ಶಾಂತಿನಗರ, ಜಯನಗರ, ಗಾಂಧಿನಗರ, ಶೇಷಾದ್ರಿಪುರಂ, ಯಲಹಂಕ, ಹೆಬ್ಬಾಳ ಸುತ್ತಮುತ್ತ ಧಾರಾಕಾರ ಮಳೆಯಾಗಿದೆ.
ಇಂದು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆದಿದ್ದು, ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ನವೆಂಬರ್ 16ರವರೆಗೆ ಅಲಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ನವೆಂಬರ್ 17ರಂದು ಹಲವು ಕಡೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ನವೆಂಬರ್ 13ರಿಂದ 17ರವರೆಗೆ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ನವೆಂಬರ್ 15ರವರೆಗೆ ಅಲಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು, ನವೆಂಬರ್16, 17ರಂದು ಹಲವು ಕಡೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.