ಬೆಂಗಳೂರು : ಹುಬ್ಬಳ್ಳಿ ರೈಲ್ವೆ ನಿಲ್ದಾಣವನ್ನು ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣ-ಹುಬ್ಬಳ್ಳಿ ಎಂದು ನಾಮಕರಣ ಮಾಡುವ ಮುಖಾಂತರ ಉತ್ತರಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.
ರೈಲ್ವೆ ನಿಲ್ದಾಣಕ್ಕೆ ನಾಮಕರಣ ಮಾಡಲು ಸಹಕರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಸೇರಿ ಎಲ್ಲರಿಗೂ ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದಿಸಿದ್ದಾರೆ.
ಹುಬ್ಬಳ್ಳಿಯ ರೈಲ್ವೆ ನಿಲ್ದಾಣಕ್ಕೆ ಮಹಾನ್ ತಪಸ್ವಿ, ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮೀಜಿ ಅವರ ಹೆಸರಿಡುವುದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿರೋದು ಅತ್ಯಂತ ಸಂತೋಷವಾಗಿದೆ. ಈ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ, ರೈಲ್ವೆ ಸಚಿವ ಪಿಯೂಷ್ ಗೋಯಲ್, ಸುರೇಶ್ ಅಂಗಡಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಸಚಿವ ಜಗದೀಶ್ ಶೆಟ್ಟರ್ ಕೂಡ ಟ್ವೀಟ್ ಮಾಡಿದ್ದಾರೆ.