ಬೆಂಗಳೂರು/ದೆಹಲಿ: ದೆಹಲಿಯ ಎಐಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯ ನಾಯಕರು, ಶಾಸಕರು, ಮುಖಂಡರೊಂದಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದರು. ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಖಂಡಿಸಿ ವಿವಿಧ ರಾಜ್ಯಗಳ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಲಿದ್ದು, ಪೂರ್ವಭಾವಿಯಾಗಿ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಚರ್ಚಿಸಿದರು.
ಅಗ್ನಿಪಥ್ ಯೋಜನೆ ವಿರೋಧಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವ ಮೂಲಕ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಶಕ್ತಿಪ್ರದರ್ಶನಕ್ಕೆ ಮುಂದಾಗಿದೆ. ದೆಹಲಿಯ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ನಾಯಕರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಸೂಚನೆ ನೀಡಿದೆ. ಸಾಧ್ಯವಾದಷ್ಟು ಹೆಚ್ಚು ಜನರನ್ನು ಸೇರಿಸಿ ಶಕ್ತಿಪ್ರದರ್ಶನ ಮಾಡಲು ಕೈ ಹೈಕಮಾಂಡ್ ತಯಾರಿ ಮಾಡಿಕೊಂಡಿದೆ.

ಈ ಹಿನ್ನೆಲೆಯಲ್ಲಿ ಮಂಗಳವಾರವೇ ದೆಹಲಿಗೆ ತೆರಳಿರುವ ರಾಜ್ಯ ನಾಯಕರು ಇಂದಿನ ಹೋರಾಟಕ್ಕೆ ಸಕಲ ಸಿದ್ಧತೆ ಕೈಗೊಂಡಿದ್ದಾರೆ. ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುತ್ತಿರುವುದನ್ನು ಖಂಡಿಸಿ ಕಳೆದ ವಾರ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ನಾಯಕರನ್ನ ಬಂಧಿಸಲಾಗಿತ್ತು. ಇಂದೂ ಸಹ ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆ ಹೆಚ್ಚಿದೆ. ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಪೊಲೀಸರು ವಶಕ್ಕೆ ಪಡೆಯುತ್ತಾರೋ ಅಥವಾ ಅದಕ್ಕೆ ಮುನ್ನವೇ ವಶಕ್ಕೆ ಪಡೆದು ಹೋರಾಟವನ್ನು ತಡೆ ಹಿಡಿಯುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.
ಇದನ್ನೂ ಓದಿ: ಮನಸು ಮಾಡಿದರೆ ನಾನು ಕೂಡ ಸಿಎಂ ಆಗುತ್ತೇನೆ: ಜನಾರ್ದನ ರೆಡ್ಡಿ ವಿಶ್ವಾಸ