ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ ತೆರಳಲಿದ್ದಾರೆ. ಗುರುವಾರ ನಡೆಯುವ ಮಹತ್ವದ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ.
ಗುರುವಾರ ಬೆಳಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅಧ್ಯಕ್ಷತೆಯಲ್ಲಿ ನಡೆಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಶಾಸಕಾಂಗ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಹಾತ್ಮ ಗಾಂಧಿಯವರ 150ನೇ ಜನ್ಮದಿನಾಚರಣೆ ಹಾಗೂ ಪಕ್ಷದ ಸದಸ್ಯತ್ವ ನೋಂದಣಿ ಸೇರಿದಂತೆ ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದ್ದು, ವಿವಿಧ ರಾಜ್ಯಗಳಿಂದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಸೆ.12ರಂದು ದೆಹಲಿಗೆ ತೆರಳಲಿದ್ದು, ಅವರು ಕೂಡ ಈ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಜೊತೆಗೆ ಅವರು, ಅತ್ಯಂತ ಪ್ರಮುಖವಾಗಿ ರಾಜ್ಯದಲ್ಲಿ ನೇಮಕವಾಗಬೇಕಿರುವ ಸ್ಥಾನಗಳ ಭರ್ತಿ ಸಂಬಂಧ ಸಮಾಲೋಚಿಸಲು ತೆರಳುತ್ತಿದ್ದಾರೆ ಎಂದು ಹೇಳಲಾಗ್ತಿದೆ. ಪ್ರತಿಪಕ್ಷದ ನಾಯಕರ ಆಯ್ಕೆ ಸೇರಿದಂತೆ ವಿವಿಧ ಹುದ್ದೆಗಳಿಗೆ ಕಾಂಗ್ರೆಸ್ನಲ್ಲಿ ನೇಮಕವಾಗಬೇಕಿದೆ. ಆಕಾಂಕ್ಷಿಗಳ ಪಟ್ಟಿಯೊಂದಿಗೆ ದಿನೇಶ್ ಗುಂಡೂರಾವ್ ತೆರಳುತ್ತಿದ್ದು, ಪಕ್ಷದ ಹೈಕಮಾಂಡ್ ನಾಯಕರು, ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಚರ್ಚಿಸಿ ಅಂತಿಮ ಪಟ್ಟಿಯೊಂದಿಗೆ ರಾಜ್ಯಕ್ಕೆ ವಾಪಸಾಗಲಿದ್ದಾರೆ.