ಬೆಂಗಳೂರು: ಹೈಕಮಾಂಡ್ ಆಹ್ವಾನದ ಮೇರೆಗೆ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ.
ತಮ್ಮ ನಿವಾಸಕ್ಕೆ ಆಗಮಿಸಿದ ಕೆಲ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು ಅವರು ಸಂಜೆ 4.30 ರ ಸುಮಾರಿಗೆ ಕಾರಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ತೆರಳಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಸಿದ್ದರಾಮಯ್ಯ ತೆರಳಿದ್ದು, ಆರು ಗಂಟೆ ಸುಮಾರಿಗೆ ಹೊರಟ ವಿಮಾನದಲ್ಲಿ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಅವರ ಜೊತೆ ಶಾಸಕ ಭೈರತಿ ಸುರೇಶ್ ಮತ್ತಿತರ ಮುಖಂಡರು ಕೂಡ ತೆರಳಿದರು.
ನಾಳೆ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿರುವ ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ ಸ್ಥಾನ, ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷರ ಹುದ್ದೆ ಆಯ್ಕೆ ಮಾಡುವ ಕುರಿತು ಸುಧೀರ್ಘ ಚರ್ಚೆ ನಡೆಸಲಿದ್ದಾರೆ. ಇದರ ಜೊತೆಗೆ ಪಕ್ಷ ಸಂಘಟನೆ, ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಯಾವ ರೀತಿ ತಯಾರಿ ನಡೆಸಬೇಕು ಎಂಬುದರ ಕುರಿತು ಸಹ ಹೈಕಮಾಂಡ್ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ.
ಎಲ್ಲಕ್ಕಿಂತ ಮುಖ್ಯವಾಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣ ಮತ್ತು ಪಕ್ಷದಲ್ಲಿರುವ ಗುಂಪುಗಳ ಬಗ್ಗೆ ಹೈಕಮಾಂಡ್ ಮಾಹಿತಿ ಪಡೆಯಲಿದೆ. ಮೂಲ, ವಲಸಿಗ ನಾಯಕರ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.