ಬೆಂಗಳೂರು: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಮಹಾಘಟಬಂಧನ್ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ರಾಜ್ಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.
ಸರಣಿ ಟ್ವೀಟ್ ಮೂಲಕ ಮಹಾರಾಷ್ಟ್ರದ ಮೈತ್ರಿ ಸರ್ಕಾರದ ಸಿಎಂ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕ ಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ. ಬೆಳಗಾವಿ ನಮ್ಮದು ಎಂದು ಹೇಳುವ ಮೂಲಕ ನಾಡು-ನುಡಿ ವಿಚಾರದಲ್ಲಿ ರಾಜಕೀಯವನ್ನು ಮೀರಿ ನಿರ್ಧಾರ ಕೈಗೊಳ್ಳುತ್ತೇವೆ ಎನ್ನುವ ಸಂದೇಶವನ್ನು ನೀಡಿದ್ದಾರೆ.
ಮಹಾಜನ್ ವರದಿ ಅಂತಿಮ:
ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಉದ್ಧವ್ ಠಾಕ್ರೆ ಅವರೇ, ಇತ್ಯರ್ಥವಾಗಿರುವ ವಿಷಯವನ್ನು ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ ಎಂದಿದ್ದಾರೆ.
ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿಗಳ ಉದ್ಧಟತನದ ಹೇಳಿಕೆಗೆ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು, ಅಧಿಕೃತವಾಗಿ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಸಲಹೆ ನೀಡಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೇ, ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ಖಡಕ್ ಸಂದೇಶ ರವಾನಿಸಿದ್ದಾರೆ.
ಈ ಮೂಲಕ ಮಹಾರಾಷ್ಟ್ರದಲ್ಲಿ ತಮ್ಮದೇ ಪಕ್ಷದ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಿದ್ದರೂ, ಅದಕ್ಕಿಂತಲೂ ನೆಲ-ಜಲ ಭಾಷೆ ಮುಖ್ಯ ಎನ್ನುವ ಸಂದೇಶದೊಂದಿಗೆ ಮಹಾರಾಷ್ಟ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯವನ್ನು ಸಿದ್ದರಾಮಯ್ಯ ಮಾಡಿದ್ದಾರೆ.
ಇದನ್ನೂ ಓದಿ: ಗಡಿ ವಿಚಾರ ಎತ್ತುವುದು ಸರಿಯಲ್ಲ, ಮಹಾಜನ್ ವರದಿಯೇ ಅಂತಿಮ: ಡಿ.ಕೆ.ಶಿವಕುಮಾರ್