ಬೆಂಗಳೂರು : ಜ್ವರ ಹಾಗು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಹಿರಿಯ ನಾಯಕ ಎಸ್ಎಂ ಕೃಷ್ಣ ಚೇತರಿಸಿಕೊಳ್ಳುತ್ತಿದ್ದು, ಎರಡು ಮೂರು ದಿನಗಳಲ್ಲಿ ಮನೆಗೆ ಮರಳಲಿದ್ದಾರೆ. ಹಾಗಾಗಿ ಯಾರೂ ಆತಂಕಕ್ಕೆ ಒಳಗಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ನಗರದ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾರೋಗ್ಯರಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಎಸ್ ಎಂ ಕೃಷ್ಣರ ಯೋಗಕ್ಷೇಮ ವಿಚಾರಿಸಿದರು. ವೈದ್ಯರ ಜೊತೆ ಚರ್ಚಿಸಿ ಕೃಷ್ಣ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಂಡರು. ಆರೋಗ್ಯ ಸಚಿವ ಸುಧಾಕರ್ ಕೂಡ ವೈದ್ಯರಿಂದ ವೈದ್ಯಕೀಯ ವಿವರದ ಮಾಹಿತಿ ಪಡೆದರು.
ಎಸ್ ಎಂ ಕೃಷ್ಣ ಭೇಟಿ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಿರಿಯ ನಾಯಕ ಎಸ್ ಎಂ ಕೃಷ್ಣ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಯಿತು. ನಿರಂತರ ಚಿಕಿತ್ಸೆಯಿಂದ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಎರಡು ಮೂರು ದಿನಗಳಲ್ಲಿ ಅವರು ಡಿಸ್ಚಾರ್ಜ್ ಆಗುತ್ತಾರೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಪೇ ಸಿಎಂ ಅಭಿಯಾನ ವಿಚಾರವಾಗಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿಎಂ ಬೊಮ್ಮಾಯಿ, ಮೈಸೂರಿಗೆ ತೆರಳಲು ಹೆಚ್ ಎ ಎಲ್ ವಿಮಾನ ನಿಲ್ದಾಣದ ಕಡೆ ಪ್ರಯಾಣಿಸಿದರು.
ಇದನ್ನೂ ಓದಿ : ಸರ್ಕಾರದ ವಿರುದ್ಧ ಕಾಂಗ್ರೆಸ್ ಅಭಿಯಾನ ಮುಂದುವರಿಕೆ: ಸಚಿವ ಅಶೋಕ್ ಕ್ಷೇತ್ರದಲ್ಲಿ ಪೋಸ್ಟರ್ ಅಳವಡಿಕೆ