ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಂದಿನ ವರ್ಷ ದಿನಕ್ಕೆ ಎಷ್ಟು ತ್ಯಾಜ್ಯ ಸಂಗ್ರಹವಾಗುತ್ತದೆ, ಅದನ್ನು ವೈಜ್ಞಾನಿಕವಾಗಿ ಹೇಗೆ ವಿಲೇವಾರಿ ಮಾಡಲಾಗುತ್ತದೆ ಎಂಬ ವಿವರಗಳನ್ನು ಒಳಗೊಂಡ ಕ್ರಿಯಾ ಯೋಜನೆಯನ್ನು ಸಲ್ಲಿಸುವಂತೆ ಹೈಕೋರ್ಟ್ ಬಿಬಿಎಂಪಿಗೆ ನಿರ್ದೇಶಿಸಿದೆ.
ನಗರದಲ್ಲಿನ ಘನ ತ್ಯಾಜ್ಯ ವಿಲೇವಾರಿ ವಿಚಾರವಾಗಿ ಸಲ್ಲಿಕೆಯಾಗಿರುವ ವಿವಿಧ ಪಿಐಎಲ್ಗಳ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ. ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ನಿರ್ದೇಶನಗಳ ಅನ್ವಯ ಈವರೆಗೆ ಕೈಗೊಂಡಿರುವ ಕ್ರಮಗಳ ವರದಿಯನ್ನು ಪಾಲಿಕೆ ಹೈಕೋರ್ಟ್ಗೆ ಸಲ್ಲಿಸಿದೆ. ಆದರೆ ವರದಿಯಲ್ಲಿ ಮುಂದಿನ ದಿನಗಳಲ್ಲಿ ತ್ಯಾಜ್ಯ ನಿರ್ವಹಣೆಗಾಗಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾಹಿತಿ ಇಲ್ಲ.
ಈ ಹಿನ್ನೆಲೆ ಹೈಕೋರ್ಟ್, ಪಾಲಿಕೆ ಸಲ್ಲಿಸಿರುವ ವರದಿಯಲ್ಲಿ ಸದ್ಯದ ಕ್ರಮಗಳ ಬಗ್ಗೆ ಮಾತ್ರವೇ ಮಾಹಿತಿ ಇದೆ. ಆದರೆ ಬೆಂಗಳೂರು ನಗರ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ತ್ಯಾಜ್ಯ ಸಂಗ್ರಹ ಹೆಚ್ಚಾಗಲಿದೆ. ಹೀಗಾಗಿ ಭವಿಷ್ಯವನ್ನು ದೃಷ್ಟಿಯಲ್ಲಿ ಇರಿಸಿಕೊಂಡು ಯೋಜನೆಗಳನ್ನು ರೂಪಿಸುವಂತೆ ನಿರ್ದೇಶಿಸಿದೆ. ಅಲ್ಲದೇ ಕ್ವಾರಿ ಹೊಂಡಗಳು, ಭೂ ಭರ್ತಿ ಘಟಕಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆಯೂ ತಾಕೀತು ಮಾಡಿದೆ.
ವಿಚಾರಣೆ ಸಂದರ್ಭದಲ್ಲಿ ಪಾಲಿಕೆ ಪರ ವಕೀಲರ ಅಂದಾಜು ಮಾಹಿತಿಯಂತೆ 2025ರ ವೇಳೆಗೆ ಬೆಂಗಳೂರು ನಗರದಲ್ಲಿ ಪ್ರತಿದಿನ 7 ಸಾವಿರ ಟನ್ ತ್ಯಾಜ್ಯ ಸಂಗ್ರಹವಾಗುವ ಸಾಧ್ಯತೆ ಇದೆ ಎಂಬುದನ್ನು ದಾಖಲಿಸಿಕೊಂಡಿರುವ ಹೈಕೋರ್ಟ್, ಮುಂದಿನ 2021ರ ಡಿಸೆಂಬರ್ 30ರ ವೇಳೆಗೆ ಪ್ರತಿದಿನ ನಗರದಲ್ಲಿ ಎಷ್ಟು ತ್ಯಾಜ್ಯ ಸಂಗ್ರಹವಾಗುತ್ತದೆ ಮತ್ತು ಅದನ್ನು ವೈಜ್ಞಾನಿಕವಾಗಿ ಹೇಗೆ ವಿಲೇವಾರಿ ಮಾಡಲಾಗುವುದು ಎಂಬ ಬಗ್ಗೆ ಕ್ರಿಯಾ ಯೋಜನೆಯನ್ನು ಸಲ್ಲಿಸುವಂತೆ ನಿರ್ದೇಶಿಸಿದೆ. ಅಲ್ಲದೇ ಈ ವರದಿಯೊಂದಿಗೆ ಬಿಬಿಎಂಪಿ ಆಡಳಿತಾಧಿಕಾರಿ ಪ್ರಮಾಣ ಪತ್ರ ಸಲ್ಲಿಸುವಂತೆಯೂ ಸೂಚಿಸಿದೆ.